ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ವತಿಯಿಂದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ಧರಣಿ ನಡೆಯಿತು.
ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಕೆ.ವಿ. ಭಟ್ ಮಾತನಾಡಿ, ಮುಖ್ಯಮಂತ್ರಿ ಘೋಷಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ಮಾಸಿಕ ₹10 ಸಾವಿರ ಗೌರವನಿಧಿಯನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ನೀಡಬೇಕು ಎಂದು ಆಗ್ರಹಿಸಿದರು.
ಆಶಾ ಕಾರ್ಯಕರ್ತೆಯರ ಅವೈಜ್ಞಾನಿಕ ಕಾರ್ಯ ನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರಿಸಬೇಕು, ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಗಂಟು ನೀಡಬೇಕು ಎಂದು ಅವರು ಒತ್ತಾಯಿಸಿದರು.
ನಗರ ಆಶಾ ಕಾರ್ಯಕರ್ತೆಯರಿಗೆ ₹2 ಸಾವಿರ ಗೌರವಧನ ಹೆಚ್ಚಿಸಬೇಕು, 2025 ಜೂನ್, ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದರು.
ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣವಾಗಿದ್ದು, ಅವರು ಕಟ್ಟಕಡೆಯ ಜನರನ್ನೂ ಆರೋಗ್ಯವಂತರನ್ನಾಗಿಡಲು ಹಗಲು, ರಾತ್ರಿ ಶ್ರಮಿಸುತ್ತಿದ್ದಾರೆ. ಸರ್ಕಾರಗಳು ಅವರ ಸೇವೆಗೆ ತಕ್ಕ ಪ್ರತಿಫಲ ನೀಡದೆ ನಿರಾಸೆಗೊಳ್ಳುವಂತೆ ಮಾಡಿದೆ ಎಂದು ಹೇಳಿದರು.
ತರ್ಕಬದ್ದಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಬೇಕು. ಆ ಹೆಸರಿನಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂದು ಒತ್ತಾಯಿಸಿದರು.
60 ವರ್ಷ ವಯಸ್ಸಿನ ಆಶಾ ಕಾರ್ಯಕರ್ತೆಯರನ್ನು ದಡೀರ್ ನಿವೃತ್ತಿ ಮಾಡಿದ್ದಾರೆ. 17 ವರ್ಷಗಳಿಂದ ಕೆಲಸ ಮಾಡಿರುವ ಅವರಿಗೆ ಯಾವುದೇ ಪರಿಹಾರ ನೀಡಿಲ್ಲ. ಅವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.
ಇಲಾಖೆಯ ಇತ್ತೀಚೆಗಿನ ಕೆಲವು ಆದೇಶಗಳು ಆಶಾ ಕಾರ್ಯಕರ್ತೆಯರಲ್ಲಿ ಆತಂಕ ಉಂಟು ಮಾಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದೂ ಅವರು ಹೇಳಿದರು.
ಎಐಯುಟಿಯುಸಿ ಜಿಲ್ಲಾ ಉಸ್ತುವಾರಿ ಹರಿಣಿ, ಜಿಲ್ಲಾ ಕಾರ್ಯದರ್ಶಿ ಉಮಾ ಕೆ.ಎಸ್., ಕಾರ್ಕಳ ತಾಲ್ಲೂಕು ಘಟಕ ಅಧ್ಯಕ್ಷೆ ಯಶೋಧಾ, ಕುಂದಾಪುರ ತಾಲ್ಲೂಕು ಘಟಕ ಆದ್ಯಕ್ಷೆ ಭಾರತಿ ವಂಡ್ಸೆ, ಉಡುಪಿ ತಾಲ್ಲೂಕು ಘಟಕ ಅಧ್ಯಕ್ಷೆ ಶಾಂಭವಿ ಕುಲಾಲ್ ಭಾಗವಹಿಸಿದ್ದರು.
ನೀಡಿದ ಭರವಸೆಯನ್ನು ಈಡೇರಿಸದೆ ಸರ್ಕಾರವು ವಚನ ಭ್ರಷ್ಟವಾಗಿದೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ರಾಜ್ಯದಾದ್ಯಂತ ಧರಣಿ ನಡೆಸಿದ್ದೇವೆ.– ಕೆ.ವಿ.ಭಟ್, ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ
ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹1 ಸಾವಿರ ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು.– ಸುಹಾಸಿನಿ, ಎಐಯುಟಿಯುಸಿ ಜಿಲ್ಲಾ ಘಟಕ ಅಧ್ಯಕ್ಷೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.