ADVERTISEMENT

ಉಡುಪಿ | ‘ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ’

ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2025, 7:47 IST
Last Updated 7 ಅಕ್ಟೋಬರ್ 2025, 7:47 IST
 ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧಯಕ್ಷತೆಯಲ್ಲಿ ಸಭೆ ನಡೆಯಿತು
 ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧಯಕ್ಷತೆಯಲ್ಲಿ ಸಭೆ ನಡೆಯಿತು   

ಉಡುಪಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾದ ಜಲ್‌ಜೀವನ್ ಮಿಷನ್ ಯೋಜನೆಯಡಿಯ ಕುಡಿಯುವ ನೀರಿನ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧಿಕಾರಿಗಳಿಗೆ ಸೂಚಿಸಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ನಡೆದ ಕುಡಿಯುವ ನೀರಿನ ಗುಣಮಟ್ಟ ಮೇಲ್ವಿಚಾರಣೆಯ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಪ್ರತಿ ಮನೆಗೂ ನೀರಿನ ಸಂಪರ್ಕ ಒದಗಿಸಿ ಶೇ 100 ರಷ್ಟು ಪ್ರಗತಿ ದಾಖಲಿಸಬೇಕು ಎಂದು ಅವರು ಹೇಳಿದರು.

ADVERTISEMENT

ನಳ್ಳಿ ನೀರಿನ ಸಂಪರ್ಕದಲ್ಲಿ ಒಟ್ಟು 1,80,868ರಲ್ಲಿ 1,49,416 ಸಂಪರ್ಕ ನೀಡಲಾಗಿದ್ದು ಶೇ 83 ರಷ್ಟು ಗುರಿ ಸಾಧಿಸಲಾಗಿದೆ. ಜಿಲ್ಲೆಯ 7 ತಾಲ್ಲೂಕುಗಳ 155 ಗ್ರಾಮದ 246 ಹಳ್ಳಿಗಳ 3402 ಆವಾಸಸ್ಥಾನಗಳ 2,47,190 ಮನೆಗಳಲ್ಲಿ 2,15,738 ಮನೆಗಳಿಗೆ ನೀರಿನ ಸಂಪರ್ಕ ನೀಡಲಾಗಿದ್ದು 31,452 ಮನೆಗಳಿಗೆ ನೀರಿನ ಸಂಪರ್ಕ ಬಾಕಿ ಇದೆ ಎಂದು ಹೇಳಿದರು.

ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಬೈಂದೂರು ತಾಲ್ಲೂಕಿನ 788 ಗ್ರಾಮೀಣ ಜನವಸತಿ ಮತ್ತು ಬೈಂದೂರು ಪಟ್ಟಣ ವ್ಯಾಪ್ತಿಯಲ್ಲಿ ₹305.12 ಕೋಟಿ ವೆಚ್ಚದ ಕಾಮಗಾರಿ ಹಾಗೂ ಕುಂದಾಪುರ ತಾಲ್ಲೂಕಿನ ಹಾಲಾಡಿ ಗ್ರಾಮದ ಕೆಪಿಸಿ ಡ್ಯಾಂ ಬಳಿಯ ವಾರಾಹಿ ನದಿಯಿಂದ ಕಾರ್ಕಳ, ಹೆಬ್ರಿ ಮತ್ತು ಕಾಪು ತಾಲ್ಲೂಕಿನ 69 ಬೃಹತ್ ನೀರು ಸರಬರಾಜು ಯೋಜನೆಯಡಿ ₹528.42 ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿದ್ದು ಎಲ್ಲ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

ಏಕ ಗ್ರಾಮ ಕುಡಿಯುವ ನೀರಿನ ಯೋಜನೆಯಡಿ 525 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಅದರಲ್ಲಿ 487 ಕಾಮಗಾರಿಗಳು ಪೂರ್ಣವಾಗಿವೆ. 38 ಕಾಮಗಾರಿಗಳು ಪ್ರಗತಿಯಲ್ಲಿದ್ದು ಶೇ 93 ರಷ್ಟು ಗುರಿ ಸಾಧಿಸಲಾಗಿದೆ
ಪ್ರತೀಕ್ ಬಾಯಲ್ ಜಿಲ್ಲಾ ಪಂಚಾಯಿತಿ ಸಿಇಒ

‘ಪ್ರಮಾಣಪತ್ರ ಪಡೆಯಿರಿ’

ಕಾರ್ಕಳ ಮತ್ತು ಕುಂದಾಪುರ ವ್ಯಾಪ್ತಿಯಲ್ಲಿ ಮೀಸಲು ಮತ್ತು ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಮತ್ತು ಓವರ್ ಹೆಡ್ ಟ್ಯಾಂಕ್ ಕಾಮಗಾರಿಗಳಿಗೆ ಅರಣ್ಯ ಇಲಾಖೆಯ ಅನುಮತಿಯ ಅಗತ್ಯವಿದ್ದು ಅರಣ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದು ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ತಿಗೊಳಿಸಬೇಕು. ಜಿಲ್ಲೆಯಲ್ಲಿ ಬಾಕಿ ಉಳಿದಿರುವ ನಳ್ಳಿ ನೀರಿನ ಸಂಪರ್ಕಗಳ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಿ ಕಾಮಗಾರಿ ಮುಗಿದಿರುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ಪ್ರತೀಕ್ ಬಾಯಲ್ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.