
ಉಡುಪಿ: ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹಂಚಿಕೆಯಾಗಿರುವ ನಿವೇಶನದಲ್ಲಿ ಉದ್ದಿಮೆದಾರರು ನಿಯಮಾನುಸಾರ ಆರು ತಿಂಗಳೊಳಗಾಗಿ ಕೈಗಾರಿಕಾ ಚಟುವಟಿಕೆ ಆರಂಭಿಸಬೇಕು. ಇಲ್ಲದಿದ್ದರೆ ನಿವೇಶನಗಳನ್ನು ಮರು ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೈಗಾರಿಕೋದ್ಯಮಿಗಳು ಕೈಗಾರಿಕಾ ಘಟಕ ಸ್ಥಾಪನೆಗೆ ಪಡೆದಿರುವ ನಿವೇಶನಗಳಲ್ಲಿ ಉದ್ದಿಮೆ ಆರಂಭಿಸದೇ ಹೆಚ್ಚುವರಿ ಕಾಲಾವಕಾಶ ಕೋರಿ ಪದೇ ಪದೇ ಮನವಿ ಸಲ್ಲಿಸುತ್ತಿದ್ದಾರೆ. ಉತ್ಪನ್ನ ಹಾಗೂ ಘಟಕದ ಹೆಸರು ಬದಲಾವಣೆ, ಹೆಚ್ಚುವರಿ ಕಾಲಾವಕಾಶ ಸೇರಿದಂತೆ ಅಸಮರ್ಪಕ ಕಾರಣ ನೀಡಿ ಕಾರ್ಯಚಟುವಟಿಕೆ ಆರಂಭಿಸದೇ ಇರುವವರ ನಿವೇಶನಗಳನ್ನು, ಕೈಗಾರಿಕೆ ಪ್ರಾರಂಭಿಸಲು ನಿವೇಶನ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿರುವ ಆಸಕ್ತರಿಗೆ ಮರು ಹಂಚಿಕೆ ಮಾಡಲು ಆದ್ಯತೆಯ ಮೇಲೆ ಕ್ರಮ ವಹಿಸಬೇಕು ಎಂದರು.
ಹೊಸದಾಗಿ ನಿವೇಶನ ಕೋರಿ ಆನ್‌ಲೈನ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿದಾರರ ಜಾಗದ ಬೇಡಿಕೆಯು 2 ಎಕರೆಗಿಂತ ಕಡಿಮೆ ಇದ್ದು, ಯೋಜನಾ ವೆಚ್ಚವೂ ₹15 ಕೋಟಿಗಿಂತ ಕಡಿಮೆ ಇದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಚರ್ಚಿಸಿ ನಿವೇಶನ ಹಂಚಿಕೆಗೆ ಅನುವು ಮಾಡಿಕೊಡಬೇಕು ಎಂದು ಹೇಳಿದರು.
ನಿವೇಶನ ಲಭ್ಯವಿಲ್ಲದಿದ್ದಲ್ಲಿ ಹೆಚ್ಚುವರಿ ಜಾಗ ನೀಡುವಂತೆ ಆಯುಕ್ತರಿಗೆ ಪತ್ರ ಬರೆಯಬೇಕು ಎಂದ ಅವರು, ಹೊಸದಾಗಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದವರ ಪಟ್ಟಿ ನೀಡುವಂತೆ ತಿಳಿಸಿದರು.
ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಭೂಮಿಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ಆದ್ಯತೆಯ ಮೇಲೆ ಕೈಗೊಂಡು, ಒಂದು ತಿಂಗಳೊಳಗಾಗಿ ಪರಿಹಾರ ಧನವನ್ನು ಸಂತ್ರಸ್ತರಿಗೆ ಹಸ್ತಾಂತರಿಸಬೇಕು. ಪರಿಹಾರ ಪಡೆಯಲು ಹಿಂದೇಟು ಹಾಕುವ ಭೂ ಮಾಲಕರಿಗೆ ಸಂಬಂಧಿಸಿದ ಪರಿಹಾರ ಮೊತ್ತವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸುವುದರೊಂದಿಗೆ ಮುಂದಿನ ಕ್ರಮ ಕೈಗೊಳ್ಳಬೇಕು ಎಂದರು.
ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳಾದ ರಸ್ತೆ, ಚರಂಡಿ, ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದರು.
ಕೌಶಲಾಭಿವೃದ್ಧಿ ಇಲಾಖೆಯ ವತಿಯಿಂದ ಪಿ.ಎಂ ವಿಶ್ವಕರ್ಮ ಯೋಜನೆಯ 6,307 ಫಲಾನುಭವಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. 3,992 ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲು ಸಾಲ ಸೌಲಭ್ಯ ಮಂಜೂರಾಗಿದ್ದು, 3,675 ಫಲಾನುಭವಿಗಳ ಖಾತೆಗೆ ಆರ್ಥಿಕ ಸಹಾಯಧನವನ್ನು ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಆಯುಕ್ತ ಮಂಹಾತೇಶ ಹಂಗರಗಿ, ಹರೀಶ್ ಕುಂದರ್ ಇದ್ದರು.
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಿದ್ದಲ್ಲಿ ಆರ್ಥಿಕತೆಯ ಅಭಿವೃದ್ಧಿಯ ಜೊತೆಗೆ ಹೆಚ್ಚಿನ ಉದ್ಯೋಗ ಸೃಷ್ಟಿ ಸಾಧ್ಯವಾಗಲಿದೆ. ನವ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಬೇಕು .ಸ್ವರೂಪ ಟಿ.ಕೆ. ಜಿಲ್ಲಾಧಿಕಾರಿ
‘ಆದ್ಯತೆಯಲ್ಲಿ ಜಮೀನು ಗುರುತಿಸಿ’ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಹೆಬ್ರಿ ತಾಲ್ಲೂಕಿನ ಶಿವಪುರದಲ್ಲಿ 74.84 ಎಕರೆ ಹಾಗೂ ಕೆರೆಬೆಟ್ಟುವಿನಲ್ಲಿ 38.75 ಎಕರೆ ಖಾಸಗಿ ಹಾಗೂ ಸರ್ಕಾರಿ ಜಮೀನು ಸೇರಿದಂತೆ ಒಟ್ಟು 113.59 ಎಕರೆ ಜಮೀನಿನ ಗಡಿ ಗುರುತಿಸುವ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳುವಂತೆ ಈಗಾಗಲೇ ಕೆ.ಐ.ಎ.ಡಿ.ಬಿ. ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅವುಗಳಲ್ಲಿ 36.56 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಲು ಗುರುತಿಸಿರುವ ಕೆಲವು ಸರ್ವೆ ನಂಬರ್‌ಗಳು ಅರಣ್ಯ ಹಾಗೂ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಬರುವ ಕಾರಣ ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿ ಸರ್ವೆ ನಡೆಸಿ ವರದಿ ನೀಡಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.