ADVERTISEMENT

ಉಡುಪಿ | ಹಸಿರು ಪಟಾಕಿ ಮಾತ್ರ ಬಳಸಿ: ಜಿಲ್ಲಾಧಿಕಾರಿ

ನಿಯಮಬಾಹಿರವಾಗಿ ಪಟಾಕಿ ದಾಸ್ತಾನು ಮಾಡಿದರೆ ಕ್ರಮ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 5:16 IST
Last Updated 26 ಸೆಪ್ಟೆಂಬರ್ 2025, 5:16 IST
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.ಅಧ್ಯಕ್ಷತೆಯಲ್ಲಿ ಸಭೆ ಜರುಗಿತು
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.ಅಧ್ಯಕ್ಷತೆಯಲ್ಲಿ ಸಭೆ ಜರುಗಿತು   

ಉಡುಪಿ: ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಸುಡುಮದ್ದು ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಹೇಳಿದರು.

ನಿಯಮಬಾಹಿರವಾಗಿ ಪಟಾಕಿ ದಾಸ್ತಾನು ಮಾಡಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ನಿಗದಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ಹೊಸದಾಗಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯುವವರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಗ್ನಿಶಾಮಕ, ಪೊಲೀಸ್ ಇಲಾಖೆ, ತಹಶೀಲ್ದಾರ್‌ ಕಚೇರಿ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಪಡೆದ ನಿರಾಕ್ಷೇಪಣಾ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದರು.

ಸುಡುಮದ್ದು ಮಾರಾಟ ಮಳಿಗೆಗಳನ್ನು ತಾತ್ಕಾಲಿಕ ತೆರೆಯಲು ಅನುಮತಿ ನೀಡುವ ಮೊದಲು ತಹಶೀಲ್ದಾರರ ನೇತೃತ್ವದ ಸಮಿತಿಯು ಖುದ್ದು ಸ್ಥಳ ಪರಿಶೀಲನೆ ನಡೆಸುವುದರೊಂದಿಗೆ, ಜನನಿಬಿಡ ಪ್ರದೇಶಗಳಲ್ಲಿ, ಸಂಚಾರ ವ್ಯವಸ್ಥೆಗೆ ಅಡಚಣೆಯಾಗುವ ಕಡೆಗಳಲ್ಲಿ, ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಬಾರದು ಎಂದು ಸೂಚಿಸಿದರು.

ಪಟಾಕಿ ಮಾರಾಟ ಮಾಡುವ ಸ್ಥಳಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಈ ಸಮಯದಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದರು.

ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯುಆರ್ ಕೋಡ್ ಇದ್ದು, ಈ ಚಿಹ್ನೆ ಹೊಂದಿರುವ ಬಗ್ಗೆ ಪರಿಸರ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಹಸಿರು ಪಟಾಕಿಯ ಚಿಹ್ನೆ ಇಲ್ಲದೇ ಇದ್ದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮವಹಿಸಬೇಕು ಎಂದು ಹೇಳಿದರು.

ಸಹಾಯಕ ಆಯುಕ್ತೆ ರಶ್ಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಸಭೆ ಆಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

ಎಲ್ಲಾ ಮಳಿಗೆ ಹಾಗೂ ಗೋದಾಮುಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ. ತಾಲ್ಲೂಕು ಸಮಿತಿಯು ಈ ಬಗ್ಗೆ ಆಗಾಗ ಪರಿಶೀಲನೆ ನಡೆಸಬೇಕು
ಸ್ವರೂಪಾ ಟಿ.ಕೆ. ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.