
ಉಡುಪಿ: ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿದಾಗ ಮಾತ್ರ ಅವುಗಳು ಫಲಪ್ರದವಾಗುತ್ತವೆ. ಗ್ಯಾರಂಟಿ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕುರಿತ ಕಲಾಜಾಥಾ ಪ್ರಚಾರ ಆಂದೋಲನ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂವಿಧಾನದ ಆಶಯದಂತೆ ದೇಶದ ಜನಸಾಮಾನ್ಯರಿಗೆ ಸಮಾನತೆಯನ್ನು ಕಲ್ಪಿಸುವ ದೃಷ್ಟಿಯಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗಿದೆ ಎಂದರು.
ಎರಡೂವರೆ ವರ್ಷಗಳ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜಿಲ್ಲೆಯ ಅರ್ಹ ಫಲಾನುಭವಿಗಳ ಖಾತೆಗೆ ₹2,500 ಕೋಟಿಯನ್ನು ಯಾವುದೇ ಮಧ್ಯವರ್ತಿ ಹಾವಳಿ ಇಲ್ಲದೇ ನೇರವಾಗಿ ಜಮಾ ಮಾಡಲಾಗಿದೆ ಎಂದರು.
ಬ್ರಹ್ಮಾವರ ತಾಲ್ಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಸುನೀತಾ ಶೆಟ್ಟಿ ಮಾತನಾಡಿ, ಗ್ಯಾರಂಟಿ ಯೋಜನೆಯೊಂದಿಗೆ ಪೊಲೀಸರಿಂದ ತರಬೇತಿ ಪಡೆದ ಮಹಿಳೆಯರಿಂದಲೇ ರೂಪಿಸಲಾದ ಅಕ್ಕ ಪಡೆಯು ಸಂಕಷ್ಟದಲ್ಲಿರುವ ಮಹಿಳೆಯರಿಗೆ ಪಾಲಿಗೆ ವರದಾನವಾಗಲಿದೆ ಎಂದರು.
ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಮಾರುತಿ ಕಲಾಸಂಘ ತೊಗಲು ಗೊಂಬೆ ಕಲಾ ತಂಡದವರು ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ತೊಗಲು ಗೊಂಬೆಯಾಟ ಪ್ರದರ್ಶಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಪ್ರಶಾಂತ್ ಜತ್ತನ್, ಉಡುಪಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ರಮೇಶ್ ಕಾಂಚನ್, ಸದಸ್ಯರಾದ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ಭಾಸ್ಕರ ರಾವ್ ಕಿದಿಯೂರು, ಹರಿಪ್ರಸಾದ್ ರೈ, ಜಿ. ಶಂಕರ್ ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ., ನಿಕೇತನ, ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.