
ಉಡುಪಿ: ಶಿಕ್ಷಣ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಜಿಲ್ಲೆಯು ಆರೋಗ್ಯ ಸೇವೆಯಲ್ಲಿಯೂ ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆದರ್ಶ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಆದರ್ಶ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಸಿಎಸ್‌ಐ ಲೊಂಬಾರ್ಡ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್ ಸಹಯೋಗದಲ್ಲಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸೋಮವಾರ ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ಯಾನ್ಸರ್ ರೋಗದ ಆರಂಭಿಕ ಪತ್ತೆಯಿಂದ ಅನೇಕ ಜೀವಗಳನ್ನು ಉಳಿಸಬಹುದು. ಅನಾರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ಬರುವ ಸಂಭವ ಹೆಚ್ಚಿದ್ದು, ರೋಗ ಹಾಗೂ ಆರಂಭಿಕ ಚಿಕಿತ್ಸೆ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದು ಪ್ರತಿಪಾದಿಸಿದರು.
ಜಿಲ್ಲೆಯ ವೈದ್ಯರು ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ. ಜನರೂ ಕೂಡ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಎಂಸಿಎಚ್ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಕವಿತಾ ಹಾಗೂ ಆದರ್ಶ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ.ಅನಂತ ಎಸ್. ಮಠದ್ ಕ್ಯಾನ್ಸರ್ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲಾ ಸರ್ಜನ್ ಡಾ. ಎಚ್. ಅಶೋಕ್, ಡಾ. ವಾಸುದೇವ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮ ಅಧಿಕಾರಿ ಡಾ. ಲತಾ ನಾಯಕ್, ಆದರ್ಶ ಆಸ್ಪತ್ರೆ ಮುಖ್ಯಸ್ಥ ಡಾ. ಜಿ. ಎಸ್. ಚಂದ್ರಶೇಖರ್, ಫುಡ್ ಫಾರ್ ದ ಹಂಗ್ರಿ ಫೌಂಡೇಶನ್‌ನ ನಿಧಿ, ಐಎಂಎ ಅಧ್ಯಕ್ಷ ಡಾ. ಅಶೋಕ್ ಕುಮಾರ್, ಕಾರ್ಯದರ್ಶಿ ಡಾ. ಮಾನಸ ಉಪಸ್ಥಿತರಿದ್ದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು. ಶಶಿಧರ್ ಎಚ್. ವಂದಿಸಿದರು. ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್. ಅಶೋಕ್ ಚಾಲನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.