ADVERTISEMENT

ಹೆದ್ದಾರಿ ಕಾಮಗಾರಿ ತ್ವರಿತಗೊಳಿಸಿ: ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 5:04 IST
Last Updated 15 ಅಕ್ಟೋಬರ್ 2025, 5:04 IST
ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು
ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿದರು   

ಉಡುಪಿ: ‘ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸುವುದರೊಂದಿಗೆ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಯ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಸಂತೆಕಟ್ಟೆ ಕಲ್ಯಾಣಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಗವನ್ನು ಹೆಚ್ಚಿಸುವುದರೊಂದಿಗೆ ಶೀಘ್ರವಾಗಿ ಕಾಮಗಾರಿ ಮುಗಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ADVERTISEMENT

ಕಟಪಾಡಿಯಲ್ಲಿ ಫ್ಲೈಓವರ್ ನಿರ್ಮಾಣ ಕಾಮಗಾರಿ ವೇಳೆ ಹೆದ್ದಾರಿ ಬಂದ್ ಆಗುವ ಕಾರಣ ವಾಹನಗಳು ಸಂಚರಿಸಲು ಸರ್ವಿಸ್ ರಸ್ತೆಯಲ್ಲಿ ಅಗತ್ಯ ಕ್ರಮ ವಹಿಸಬೇಕು. ಹೆದ್ದಾರಿಯಲ್ಲಿರುವ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯವನ್ನು ಪ್ರಾರಂಭಿಸಬೇಕು, ಅರಣ್ಯ ಇಲಾಖೆಯಿಂದ ಮರಗಳ ತೆರವಿಗೆ ತ್ವರಿತವಾಗಿ ಅನುಮತಿ ಪಡೆದು ತೆರವುಗೊಳಿಸಬೇಕು ಎಂದು ಸೂಚಿಸಿದರು.

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಬಳಿ ಬೀದಿ ದೀಪ ಅಳವಡಿಸಬೇಕು. ಈಗಾಗಲೇ ಗುರುತಿಸಿರುವ 22 ಬ್ಲ್ಯಾಕ್ ಸ್ಪಾಟ್‌ಗಳಲ್ಲಿ ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಅಪಘಾತಗಳನ್ನು ಕಡಿಮೆಗೊಳಿಸಿ ಅಪಘಾತ ಮುಕ್ತ ವಲಯವಾಗಿಸಲು ಕಳೆದ ಸಭೆಯಲ್ಲಿ ಸೂಚಿಸಲಾಗಿತ್ತು. ಕಾಪು ಮತ್ತು ಪಡುಬಿದ್ರಿಯಲ್ಲಿ ಮಾತ್ರ ಕ್ರಮ ವಹಿಸಲಾಗಿದೆ. ಬಾಕಿ ಉಳಿದ ಬ್ಲ್ಯಾಕ್ ಸ್ಪಾಟ್‌ಗಳಲ್ಲಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೂಡಲೇ ಕೈಗೊಳ್ಳಬೇಕು ಎಂದು ಹೇಳಿದರು.

169ಎ ಮಲ್ಪೆಯಿಂದ ಕರಾವಳಿ ಜಂಕ್ಷನ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ 2.2 ಕಿಮೀ ಈಗಾಗಲೇ ಪ್ರಗತಿಯಲ್ಲಿದೆ. ಕಾಮಗಾರಿಗೆ ಅಗತ್ಯವಿರುವ ಉಳಿದ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಕ್ರಮ ವಹಿಸಬೇಕು. ಭೂ ಮಾಲೀಕರಿಗೆ ವೈಜ್ಞಾನಿಕವಾಗಿ ಪರಿಹಾರದ ಹಣವನ್ನು ಕೂಡಲೇ ನೀಡಲು ಕ್ರಮ ವಹಿಸಬೇಕು ಎಂದರು.

ಕಾರ್ಕಳ ತಾಲ್ಲೂಕಿನ ‘169ಎ’ಗೆ ಸಂಬಂಧಿಸಿದಂತೆ ಸಾಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫುಲ್ಕೇರಿ ಬೈಪಾಸ್, ಮುರತ್ತಂಗಡಿ ಪದವಿ ಪೂರ್ವ ಕಾಲೇಜಿನವರೆಗೆ 6 ಬಸ್ ನಿಲ್ದಾಣಗಳಿದ್ದು ಅವುಗಳ ಪುನರ್ ನಿರ್ಮಾಣ ಕಾರ್ಯ ನಡೆಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಶಾಸಕರಾದ ಯಶ್‌ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಆಯುಕ್ತೆ ರಶ್ಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಡಿ.ಎಫ್.ಒ. ಗಣಪತಿ, ಭೂದಾಖಲೆಗಳ ಉಪನಿರ್ದೇಶಕ ರವೀಂದ್ರ ಇದ್ದರು.

ಕಟಪಾಡಿಯಲ್ಲಿ ಫ್ಲೈಓವರ್ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು ನವೆಂಬರ್ ಮೊದಲನೇ ವಾರದಿಂದ ಕಾಮಗಾರಿ ಪ್ರಾರಂಭಿಸಬೇಕು
ಕೋಟ ಶ್ರೀನಿವಾಸ ಪೂಜಾರಿ ಸಂಸದ
‘ವಾಹನ ದಟ್ಟಣೆ ಸಮಸ್ಯೆ ಪರಿಹರಿಸಿ’
ಅಂಬಲಪಾಡಿ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು. ಈ ಕಾಮಗಾರಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಹತ್ತಿರ ವಾಹನ ದಟ್ಟಣೆ ಸಮಸ್ಯೆ ಉಂಟಾಗುತ್ತಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.