ಉಡುಪಿ: ನಮ್ಮ ನಾಡು, ನುಡಿ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅರಿತುಕೊಂಡು ಜೀವನ ನಡೆಸಬೇಕು. ವೈವಿಧ್ಯಮಯ ಸಂಸ್ಕೃತಿಗೆ ಹೆಸರು ವಾಸಿಯಾಗಿರುವ ನಮ್ಮ ನಾಡಿನ ಹಿರಿಮೆಯನ್ನು ತಿಳಿದುಕೊಂಡು ಅದನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅಭಿಪ್ರಾಯಪಟ್ಟರು.
ನಗರದ ಅಜ್ಜರಕಾಡಿನ ಡಾ.ಜಿ.ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಜನಪದ ಉತ್ಸವ ‘ಜನ ಜಲ್ಸಾ 2025’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಗುರಿಯನ್ನು ಹೊಂದಿರಬೇಕು. ಗುರಿ ಉತ್ತಮವಾಗಬೇಕಾದರೆ ಉತ್ತಮ ಸಂಸ್ಕೃತಿ ಅಗತ್ಯ. ಗುರು ಹಿರಿಯನ್ನು ಗೌರವಿಸಿ ಅವರ ಮಾರ್ಗದರ್ಶನದಲ್ಲಿ ಮನ್ನಡೆದರೆ ಮಾತ್ರ ಜೀವನ ಸುಂದರವಾಗಲು ಸಾಧ್ಯ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಶ್ರೀಧರ್ ಪ್ರಸಾದ್ ಕೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಭೋದಕ, ಭೋದಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ಜನಪದ ಉತ್ಸವದಲ್ಲಿ ಪಾಲ್ಗೊಂಡರು.
ಕಾಲೇಜು ವಿದ್ಯಾರ್ಥಿಗಳು ತಮ್ಮ ತರಗತಿ ಕೊಠಡಿಗಳಲ್ಲಿ ಜನಪದ ವಸ್ತುಗಳನ್ನು ಇಟ್ಟು ಅಲಂಕರಿಸಿದ್ದರು. ಸಾಂಪ್ರದಾಯಿಕ ರುಚಿಕರ ತಿಂಡಿ ತಿನಸುಗಳನ್ನು ತಯಾರಿಸಿ ಮಾರಾಟ ಮಾಡಿದರು.
ಕಾರ್ಯಕ್ರಮದಲ್ಲಿ ಸಾಫಲ್ಯ ಟ್ರಸ್ಟ್‌ನ ನಿರ್ದೇಶಕಿ ನಿರುಪಮಾ ಪ್ರಸಾದ್, ಬರಹಗಾರ್ತಿ ವಸಂತಿ ಶೆಟ್ಟಿ ಬ್ರಹ್ಮಾವಾರ, ಕಾಲೇಜಿನ ಐಕ್ಯುಎಸಿ ಸಂಚಾಲಕಿ ಶ್ರೀಮತಿ ಅಡಿಗ, ವಾಣಿಜ್ಯ ನಿಕಾಯದ ಡೀನ್ ಗೌರಿ ಎಸ್. ಭಟ್ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ಹಾಗೂ ಕಲಾ ನಿಕಾಯದ ಡೀನ್ ನಿಕೇತನಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಂದ್ರ ಕೆ. ನಿರೂಪಿಸಿದರು. ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖಾ ಎಸ್.ಎನ್ ವಂದಿಸಿದರು.
Quote - ಮಹಿಳೆಯರು ನಾಡಿನ ಸಾಂಸ್ಕೃತಿಕ ರಾಯಭಾರಿಗಳಾಗಬೇಕು. ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರಲ್ಲಿ ಮಹಿಳೆಯರ ಪಾತ್ರ ಹಿರಿದಾಗಿದೆ. ನಮ್ಮ ಸಂಸ್ಕೃತಿಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಕೆ.ವಿದ್ಯಾಕುಮಾರಿ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.