ಉಡುಪಿ: ಇಲ್ಲಿನ ನಗರಸಭೆಯನ್ನು ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವ ಕುರಿತು ಎಲ್ಲೆಡೆ ಚರ್ಚೆಗಳು ನಡೆಯುತ್ತಿದ್ದರೂ ನಗರದಲ್ಲಿ ವಾಹನ ಪಾರ್ಕಿಂಗ್ ಸಮಸ್ಯೆಗೆ ಇನ್ನೂ ಶಾಶ್ವತ ಪರಿಹಾರ ಲಭಿಸಿಲ್ಲ.
ನಗರದೆಲ್ಲೆಡೆ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಮುಖ್ಯ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವುದರ ಜೊತೆಗೆ ಅಪಘಾತಗಳಿಗೂ ಕಾರಣವಾಗುತ್ತಿದೆ.
ಕಲ್ಸಂಕ ಜಂಕ್ಷನ್‌ನಿಂದ ಕರಾವಳಿ ಜಂಕ್ಷನ್‌ವರೆಗೂ ಮುಖ್ಯರಸ್ತೆಯ ಇಕ್ಕೆಲಗಳಲ್ಲಿ ಕಾರುಗಳು, ದ್ವಿಚಕ್ರ ವಾಹನಗಳನ್ನು ನಿಲ್ಲಿಸಲಾಗುತ್ತಿದ್ದು, ಇದರಿಂದ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಈ ರಸ್ತೆಯ ಬದಿಯಲ್ಲಿರುವ ವಾಣಿಜ್ಯ ಸಂಸ್ಥೆ, ಅಂಗಡಿಗಳ ಎದುರುಗಡೆ ಕಾರುಗಳನ್ನು ನಿಲ್ಲಿಸುವುದರಿಂದ ವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ ಎಂದು ಜನರು ದೂರುತ್ತಾರೆ. ಜೊತೆಗೆ ಅಂಗಡಿಗಳಿಗೆ ಸಾಮಗ್ರಿಗಳನ್ನು ತರುವ ಗೂಡ್ಸ್ ವಾಹನಗಳನ್ನು ಕೂಡ ಹಗಲು ಹೊತ್ತಿನಲ್ಲಿ ಮುಖ್ಯ ರಸ್ತೆಯಲ್ಲೇ ನಿಲ್ಲಿಸುವುದರಿಂದಲೂ ಇತರ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ ಎಂದೂ ಆರೋಪಿಸುತ್ತಾರೆ.
ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸುವಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸುತ್ತಿದ್ದು, ಅದರಿಂದ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೂ ಬಸ್‌ಗಳ ಸಂಚಾರಕ್ಕೂ ತೊಂದರೆಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ ಈಚೆಗೆ ಇಲ್ಲಿ ರಸ್ತೆಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಲಾಕ್ ಹಾಕಿ ದಂಡ ವಿಧಿಸಿತ್ತು.
ಮಂಗಳೂರು ಸೇರಿದಂತೆ ವಿವಿಧೆಡೆಗಳಿಗೆ ತೆರಳುವವರು ತಮ್ಮ ದ್ವಿಚಕ್ರ ವಾಹನಗಳನ್ನು ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸುವಲ್ಲಿ ನಿಲ್ಲಿಸಿ ಹೋಗುತ್ತಾರೆ. ಅಂತಹ ವಾಹನಗಳು ದಿನವಿಡೀ ರಸ್ತೆಯಲ್ಲೇ ಇರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಜನರು ದೂರುತ್ತಾರೆ.
ಮಣಿಪಾಲದಲ್ಲೂ ಹೆದ್ದಾರಿಯ ಇಕ್ಕೆಲಗಳಲ್ಲಿ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸುವುದರಿಂದ ಇತರ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ ಎಂದು ಜನರು ತಿಳಿಸಿದ್ದಾರೆ.
ನಗರಸಭೆಯ ಮುಂಭಾಗದ ರಸ್ತೆಗಳಲ್ಲೂ ದ್ವಿಚಕ್ರ ವಾಹನಗಳು, ಕಾರುಗಳನ್ನು ನಿಲ್ಲಿಸುವುದರಿಂದ ವಾಹನ ದಟ್ಟಣೆ ಉಂಟಾಗುತ್ತಿದೆ. ನಗರದಲ್ಲಿ ಎಲ್ಲೂ ಸಮರ್ಪಕ ವಾಹನ ಪಾರ್ಕಿಂಗ್ ವ್ಯವಸ್ಥೆಯಿಲ್ಲ. ಈ ಕಾರಣಕ್ಕೆ ಜನರು ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸುತ್ತಾರೆ ಎನ್ನುತ್ತಾರೆ ಜನರು.
ಸಿಟಿ ಬಸ್ ನಿಲ್ದಾಣದಿಂದ ಮಸೀದಿ ರಸ್ತೆಯ ಕಡೆಗೆ ಸಾಗುವ ರಸ್ತೆಗಳಲ್ಲೂ ಅಂಗಡಿಗಳ ಮುಂದೆ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಮೊದಲೇ ಕಿರಿದಾದ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಇನ್ನಷ್ಟು ಸಮಸ್ಯೆ ಉಂಟಾಗುತ್ತಿದೆ.
ನಗರದಲ್ಲಿ ದೊಡ್ಡ ಕಟ್ಟಡಗಳು ನಿರ್ಮಾಣವಾಗುವಾಗಲೇ ಪಾರ್ಕಿಂಗ್ ವ್ಯವಸ್ಥೆ ಮಾಡುತ್ತಾರೆಯೇ ಎಂಬುದನ್ನು ನಗರಸಭೆಯವರು ಪರಿಶೀಲಿಸಿ ಅಂತಹ ಕಟ್ಟಡಗಳಿಗೆ ಮಾತ್ರ ಪರವಾನಗಿ ನೀಡಬೇಕು. ನಗರದ ಹೆಚ್ಚಿನ ಕಟ್ಟಡಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ. ಕೆಲವು ಶಾಪಿಂಗ್ ಮಾಲ್‌ಗಳಲ್ಲೂ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಗ್ರಾಹಕರಿಗೂ ತೊಂದರೆಯಾಗುತ್ತಿದೆ ಎಂದು ದೂರುತ್ತಾರೆ ನಗರವಾಸಿಗಳು.
ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಸಂಚಾರಕ್ಕೆ ಸಮಸ್ಯೆ ಉಂಟು ಮಾಡುವವರಿಗೆ ದಂಡ ಹಾಕಬೇಕು. ಅದೇ ರೀತಿ ನಗರಸಭೆಯವರು ವಾಹನ ಪಾರ್ಕಿಂಗ್‌ಗೆ ಸಮರ್ಪಕ ವ್ಯವಸ್ಥೆಯನ್ನೂ ಮಾಡಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ನಗರದ ಸಿಟಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಎಲ್ಲೂ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲ. ಈ ಕಾರಣಕ್ಕೆ ದ್ವಿಚಕ್ರ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಬೇಕಾದ ಅನಿವಾರ್ಯತೆ ಇದೆಅಭಿಷೇಕ್ ದ್ವಿಚಕ್ರ ವಾಹನ ಸವಾರ
ಸಿಟಿ ಬಸ್ ನಿಲ್ದಾಣದಿಂದ ಕಲ್ಸಂಕವರೆಗಿನ ಮುಖ್ಯ ರಸ್ತೆ ಬದಿಯಲ್ಲಿ ದೊಡ್ಡ ದೊಡ್ಡ ಕಾರುಗಳನ್ನು ನಿಲ್ಲಿಸುವುದರಿಂದ ಇತರ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಸಂಬಂಧಪಟ್ಟವರು ಗಮನಹರಿಸಬೇಕುಯೋಗೀಶ್ ದೊಡ್ಡಣಗುಡ್ಡೆ ನಿವಾಸಿ
‘ಇನ್ನಷ್ಟು ಕಾರ್ಯಾಚರಣೆ ನಡೆಸಿ’ ಈ ಹಿಂದೆ ನಗರದಲ್ಲಿ ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಅಂತಹ ವಾಹನಗಳಿಗೆ ಲಾಕ್ ಹಾಕಲಾಗುತ್ತಿತ್ತು. ಅದಕ್ಕಾಗಿಯೇ ಪೊಲೀಸರು ವಾಹನವೊಂದನ್ನು ಬಳಸುತ್ತಿದ್ದರು. ಕೆಲವು ವರ್ಷಗಳಿಂದ ಅಂತಹ ಕಾರ್ಯಾಚರಣೆ ನಡೆಯುತ್ತಿಲ್ಲ. ಮುಖ್ಯ ರಸ್ತೆಗಳ ಬದಿ ಪಾರ್ಕಿಂಗ್ ಮಾಡುವ ವಾಹನಗಳಿಗೆ ಲಾಕ್ ಹಾಕಿ ದಂಡ ವಿಧಿಸಲು ಪೊಲೀಸರು ಇನ್ನಷ್ಟು ಕಾರ್ಯಾಚರಣೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.
‘ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು’
ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯ ವಿಶ್ವೇಶ್ವರಯ್ಯ ಕಟ್ಟಡದ ಜಾಗದಲ್ಲಿ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದ್ದೇವೆ. ಸದ್ಯಕ್ಕೆ ಪಾರ್ಕಿಂಗ್ ಸಮಸ್ಯೆ ಪರಿಹರಿಸುವ ಸಲುವಾಗಿ ನಗರದ ವಿವಿಧೆಡೆ ಹಣ ಪಾವತಿಸಿ ಪಾರ್ಕಿಂಗ್ ಮಾಡುವಂತಹ ವ್ಯವಸ್ಥೆ ಮಾಡಲಾಗುವುದು ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ. ನಗರದ ಕೆ.ಎಸ್.ಆರ್.ಟಿ.ಸಿ . ಹಳೆ ಬಸ್‌ಸ್ಟ್ಯಾಂಡ್ ಜಾಗದಲ್ಲೂ ಪಾರ್ಕಿಂಗ್‌ಗೆ ಸಮರ್ಪಕ ವ್ಯವಸ್ಥೆ ಮಾಡುವ ಚಿಂತನೆ ಇದೆ. ಮಣಿಪಾಲದ ಆಸ್ಪತ್ರೆಗೆ ಬರುವವರಿಗೆ ಪಾರ್ಕಿಂಗ್ ಸಮಸ್ಯೆ ಕಾಡುತ್ತಿದೆ. ಅಲ್ಲೂ ಹಣ ಪಾವತಿಸಿ ವಾಹನ ಪಾರ್ಕಿಂಗ್ ಮಾಡುವಂತಹ ವ್ಯವಸ್ಥೆ ಆರಂಭಿಸಲಾಗುವುದು ಎಂದೂ ಅವರು ಹೇಳಿದರು.
‘ಮುಖ್ಯರಸ್ತೆಯಲ್ಲಿ ವಾಹನ ನಿಲ್ಲಿಸಿದರೆ ದಂಡ’
ನಗರದ ಮುಖ್ಯ ರಸ್ತೆಗಳ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದರೆ ಅಂತಹ ವಾಹನಗಳಿಗೆ ಲಾಕ್ ಹಾಕಲಾಗುವುದು ಮತ್ತು ದಂಡ ವಿಧಿಸಲಾಗುವುದು. ಈಗಾಗಲೇ ಪೊಲೀಸರು ಇಂತಹ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು. ಸರ್ವಿಸ್ ಬಸ್ ನಿಲ್ದಾಣದ ಮುಂಭಾಗದಲ್ಲಿ ಮುಖ್ಯ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುವವರಿಗೆ ಎಚ್ಚರಿಕೆ ನೀಡಿದರೂ ಪ್ರಯೋಜನವಾಗುತ್ತಿಲ್ಲ. ಈ ಕಾರಣಕ್ಕೆ ದಂಡ ವಿಧಿಸುತ್ತೇವೆ. ಮಣಿಪಾಲದ ಆಸ್ಪತ್ರೆ ಮುಂಭಾಗದ ರಸ್ತೆ ಬದಿ ವಾಹನಗಳನ್ನು ನಿಲ್ಲಿಸದಂತೆಯೂ ಎಚ್ಚರಿಕೆ ನೀಡಿದ್ದೇವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.