ADVERTISEMENT

ಪಿಯು ಪರೀಕ್ಷೆ | ಗೊಂದಲಗಳಿಗೆ ಆಸ್ಪದ ಬೇಡ ಎಂದ ಜಿಲ್ಲಾಧಿಕಾರಿ ಸ್ವರೂಪಾ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 2:24 IST
Last Updated 18 ಫೆಬ್ರುವರಿ 2026, 2:24 IST
<div class="paragraphs"><p>ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಸಭೆ ಜರುಗಿತು</p></div>

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧ್ಯಕ್ಷತೆಯಲ್ಲಿ ಸಭೆ ಜರುಗಿತು

   

ಉಡುಪಿ: ದ್ವಿತೀಯ ಪಿ.ಯು.ಸಿ ಪರೀಕ್ಷೆ ಇದೇ 28ರಿಂದ ಮಾರ್ಚ್ 17ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲಗಳಿಗೆ ಆಸ್ಪದ ನೀಡದೆ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕಾರಿಗಳಿಗೆ ಸೂಚಿಸಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರುಪಡಿಸಿದ ನಂತರವೇ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅನುಮತಿ ನೀಡಲಾಗುವುದು. ಪರೀಕ್ಷಾ ದಿನಗಳಂದು ಮೊಬೈಲ್, ಸ್ಮಾರ್ಟ್ ವಾಚ್, ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣ ಬಳಸುವುದನ್ನು ನಿಷೇಧಿಸಲಾಗಿದೆ ಎಂದರು.

ADVERTISEMENT

ಪರೀಕ್ಷಾ ಸಮಯದಲ್ಲಿ ಕೇಂದ್ರದ ಸುತ್ತಮುತ್ತ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ಪ್ರದೇಶದಲ್ಲಿ ಜೆರಾಕ್ಸ್, ಸೈಬರ್, ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚಿಸಲು ಕ್ರಮ ವಹಿಸಲಾಗುವುದು. ಪ್ರತಿ ಪರೀಕ್ಷಾ ಕೆಂದ್ರಗಳಿಗೆ ಪ್ರಶ್ನೆಪತ್ರಿಕೆ ಸಾಗಾಟ ಮಾಡಲು ಮೂವರು ಸದಸ್ಯರ ಸಮಿತಿಯನ್ನು ರಚಿಸಿದ್ದು, ಅವರ ವಾಹನಕ್ಕೆ ಪೊಲೀಸ್ ಸಿಬ್ಬಂದಿ ನೇಮಿಸಬೇಕು. ಪ್ರಶ್ನೆಪತ್ರಿಕೆ ಸಾಗಿಸುವ ವಾಹನಕ್ಕೆ ಜಿ.ಪಿ.ಎಸ್. ಅಳವಡಿಸಲಾಗುವುದು. ಸಿ.ಸಿ.ಟಿ.ವಿ. ಕ್ಯಾಮೆರಾ ಕಣ್ಗಾವಲಿನಲ್ಲಿ ಖಜಾನೆಯಲ್ಲಿ ಪ್ರಶ್ನೆಪತ್ರಿಕೆಗಳನ್ನು ಇರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಟಿ.ವಿ. ಕ್ಯಾಮೆರಾ ಅಳವಡಿಸಬೇಕು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ಆಸನ, ಬೆಳಕು, ಫ್ಯಾನ್, ಕುಡಿಯುವ ನೀರು ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರೀಕ್ಷಾ ಕೇಂದ್ರದಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅನುಕೂಲವಾಗುವಂತೆ ಬಸ್ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಗೆ ಅಗತ್ಯಕ್ಕನುಗುಣವಾಗಿ ಪೊಲೀಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಸಹಾಯಕ ಆಯುಕ್ತೆ ರಶ್ಮಿ, ಡಿಡಿಪಿಯು ಮಾರುತಿ, ತಹಶೀಲ್ದಾರರು ಭಾಗವಹಿಸಿದ್ದರು. ಸಭೆಗೂ ಮುನ್ನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. 

‘17181 ವಿದ್ಯಾರ್ಥಿಗಳು ನೋಂದಣಿ’

ಜಿಲ್ಲೆಯಲ್ಲಿ 29 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಕಲಾ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಒಟ್ಟು 17181 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ 16657 ಹೊಸ ವಿದ್ಯಾರ್ಥಿಗಳು 383 ಖಾಸಗಿ ಅಭ್ಯರ್ಥಿಗಳು 135 ಪುನರಾವರ್ತಿತ ಅಭ್ಯರ್ಥಿಗಳು 6 ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಛಿಸುವ ಅಭ್ಯರ್ಥಿಗಳು ಇದ್ದಾರೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಿಗದಿತ ದಿನಾಂಕಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು ಶಿಕ್ಷಾರ್ಹ ಅಪರಾಧ. ಅಂತಹ ವ್ಯಕ್ತಿಗಳ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಿದೆ.
ಸ್ವರೂಪಾ ಟಿ.ಕೆ, ಜಿಲ್ಲಾಧಿಕಾರಿ