ADVERTISEMENT

ಉಡುಪಿ| ಮಳೆಯ ಅಬ್ಬರ; ಶಾಲಾ–ಕಾಲೇಜುಗಳಿಗೆ ರಜೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2019, 12:31 IST
Last Updated 23 ಜುಲೈ 2019, 12:31 IST
   

ಉಡುಪಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 24ರಂದೂ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ.

ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಮಂಗಳವಾರವೂ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ಕಳೆದ 2 ದಿನಗಳಿಂದ ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ನೆರೆ ಭೀತಿ ಎದುರಾಗಿದೆ. ಮಂಗಳವಾರ ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮಳೆ ಹಾನಿಗೊಳಗಾದ ಹೊಂಬಾಡಿ-ಮುಂಡಾಡಿ, ಗೋಪಾಡಿ, ಕೋಟತಟ್ಟು, ಬೆಳ್ಳಂಪಳ್ಳಿ ಪ್ರದೇಶಗಳಿಗೆ ಭೇಟಿನೀಡಿ ಪರಿಶೀಲಿಸಿದರು.

ADVERTISEMENT

ಹಾನಿಗೊಳಗಾದ ಮನೆಗಳಿಗೆ ತೆರಳಿ ಸಂತ್ರಸ್ಥರಿಗೆ ಸಾಂತ್ವನ ಹೇಳಿ ಶೀಘ್ರ ಪರಿಹಾರ ವಿತರಿಸುವ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಹವಾಮಾನ ಇಲಾಖೆಯ ಸೂಚನೆಯಂತೆ ಜಿಲ್ಲೆಯಲ್ಲಿ ಸುಮಾರು 200 ಮಿ.ಮೀಗೂ ಹೆಚ್ಚು ಮಳೆಯಾಗಲಿದ್ದು, ಜುಲೈ 24ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ತುರ್ತು ಸಂದರ್ಭ ಎದುರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನ ಬಿಟ್ಟು ತೆರಳದಂತೆ ಸೂಚಿಸಲಾಗಿದೆ. ಮೊಬೈಲ್‍ ಸ್ವಿಚ್ ಆಫ್ ಮಾಡದಂತೆ ಹಾಗೂ ಹಾನಿಯಾದ ಮಾಹಿತಿ ಬಂದರೆ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.