ADVERTISEMENT

ಉಡುಪಿ | ‘ಬ್ಲ್ಯಾಕ್‌ಸ್ಪಾಟ್‌: ರಸ್ತೆ ದುರಸ್ತಿ ನಡೆಸಿ’: ಜಿಲ್ಲಾಧಿಕಾರಿ ಸೂಚನೆ

ರಸ್ತೆ ಸುರಕ್ಷತಾ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2025, 3:54 IST
Last Updated 19 ಆಗಸ್ಟ್ 2025, 3:54 IST
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ಜರುಗಿತು
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ಜರುಗಿತು   

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗುರುತಿಸಲಾದ ಬ್ಲ್ಯಾಕ್‌ಸ್ಪಾಟ್‌ ಪ್ರದೇಶಗಳಲ್ಲಿ ಅಗತ್ಯವಿರುವ ರಸ್ತೆ ಸುಧಾರಣೆ, ಅಭಿವೃದ್ಧಿ ಕಾಮಗಾರಿಗಳನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಬ್ಲ್ಯಾಕ್‌ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ ಬಹುತೇಕ ಕಡೆ ದಾರಿದೀಪ ಅಳವಡಿಕೆ, ರೋಡ್ ಮಾರ್ಕಿಂಗ್, ಪಾದಚಾರಿ ಕ್ರಾಸಿಂಗ್, ಝೀಬ್ರಾ ಕ್ರಾಸಿಂಗ್, ಸೂಚನಾ ಫಲಕ, ಹೈಮಾಸ್ಟ್ ದ್ವೀಪ ಸೇರಿದಂತೆ ಸುರಕ್ಷತಾ ವಿಧಾನಗಳನ್ನು ಅಳವಡಿಸದೇ ಇರುವುದು ಕಂಡು ಬಂದಿದೆ ಎಂದರು.

ADVERTISEMENT

ಸಾರ್ವಜನಿಕರು ವಾಹನದಲ್ಲಿ ಸಂಚರಿಸುವಾಗ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದರು.

ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿಯ ವಿವಿಧೆಡೆ ರಸ್ತೆಯ ಮಧ್ಯದಲ್ಲಿ ಜಾಹೀರಾತುಗಳನ್ನು ಅಳವಡಿಸಲು ಉಪಯೋಗಿಸಿರುವ ಕಂಬಗಳ ತೆರವು ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುವಂತಹ ಫಾಸ್ಟ್ ಫುಡ್ ಸೆಂಟರ್, ತಳ್ಳುವ ಗಾಡಿಗಳು ಹಾಗೂ ಗೂಡಂಗಡಿಗಳನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಆಟೊ ರಿಕ್ಷಾ ತಂಗುದಾಣಗಳಲ್ಲಿ ಎಲ್ಲಾ ಆಟೊ ರಿಕ್ಷಾ ಚಾಲಕರು ತಮ್ಮ ವಾಹನಗಳನ್ನು ನಿಲ್ಲಿಸಲು ಅನುಮತಿ ನೀಡಬೇಕೆಂದು ಮನವಿಗಳನ್ನು ನೀಡಿದ್ದು, ಈ ಸಂಬಂಧ ಆರ್.ಟಿ.ಒ, ಪೊಲೀಸ್ ಇಲಾಖೆ ಹಾಗೂ ನಗರಸಭೆ ಆಯುಕ್ತರು ನಿಲ್ದಾಣ ಸಾಮರ್ಥ್ಯದ ಆಧಾರ ಮೇಲೆ ಆಟೋರಿಕ್ಷಾಗಳ ನಿಲುಗಡೆಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್, ಡಿ.ಎಫ್.ಒ. ಗಣಪತಿ, ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮಿ ನಾರಾಯಣ್ ನಾಯಕ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಕಿರಣ್ ಎಸ್., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ ಭಾಗವಹಿಸಿದ್ದರು.

‘ನಿಯಮ ಪಾಲಿಸದವರಿಗೆ ನೋಟಿಸ್‌ ನೀಡಿ’:

ಉಡುಪಿ ನಗರ ವ್ಯಾಪ್ತಿಯಲ್ಲಿ 58 ಕ್ಕೂ ಹೆಚ್ಚು ವಿವಿಧ ವಾಣಿಜ್ಯ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದರಿಂದ ಕಟ್ಟಡಗಳ ಮುಂಭಾಗ ರಸ್ತೆಯ ಮೇಲೆ ಅಂಗಡಿ ಮಾಲೀಕರು ಹಾಗೂ ಗ್ರಾಹಕರು ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ. ಪಾರ್ಕಿಂಗ್ ನಿಯಮಗಳನ್ನು ಪಾಲಿಸದೇ ಇರುವ ಕಟ್ಟಡ ಮಾಲೀಕರಿಗೆ ಕೂಡಲೇ ನೋಟಿಸ್ ನೀಡಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.