ADVERTISEMENT

ಮಕ್ಕಳ ಹಕ್ಕುಗಳ ರಕ್ಷಣೆ: ಉಡುಪಿ ಮಾದರಿ

ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಆರ್‌.ಜಿ.ಆನಂದ್‌

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 15:34 IST
Last Updated 8 ಏಪ್ರಿಲ್ 2021, 15:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಉಡುಪಿ: ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆ ತಡೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಆರ್‌.ಜಿ.ಆನಂದ್ ಹೇಳಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಉಡುಪಿಯಲ್ಲಿ 28 ಮಕ್ಕಳ ಪಾಲನೆ ಹಾಗೂ ಪೋಷಣೆಯ ಹೊಣೆಹೊತ್ತಿರುವ ಸಂಘ ಸಂಸ್ಥೆಗಳಿದ್ದು, 400ಕ್ಕೂ ಹೆಚ್ಚು ಮಕ್ಕಳು ಇದ್ದಾರೆ. ಜಿಲ್ಲಾಡಳಿತದ ನಿಯಂತ್ರಣದಲ್ಲಿ ಸಂಘ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.

2021ರಲ್ಲಿ ಜಿಲ್ಲೆಯಲ್ಲಿ ಒಂದೂ ಬಾಲ್ಯ ವಿವಾಹ ನಡೆದಿಲ್ಲ. ಆದರೆ, ಬಾಲ್ಯವಿವಾಹಕ್ಕೆ ಯತ್ನಿಸಿದವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಮಕ್ಕಳ ಸ್ನೇಹಿ ಜಿಲ್ಲೆಯಾಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದು ಅಭಿನಂದನೀಯ ಎಂದರು.

ADVERTISEMENT

ಶೂನ್ಯ ಬಾಲ್ಯ ವಿವಾಹ, ಮಕ್ಕಳ ಆರೋಗ್ಯಕ್ಕೆ ಒತ್ತು, ರಕ್ಷಣೆಗೆ ಇರುವ ಕಾನೂನುಗಳ ಅನುಷ್ಠಾನದಲ್ಲಿ ಜಿಲ್ಲೆಯ ಕಾರ್ಯ ತೃಪ್ತಿತಂದಿದೆ. ಮಹಿಳೆಯರ ಹಾಗೂ ಮಕ್ಕಳ ರಕ್ಷಣೆಗೆ ಒತ್ತು, ಜಿಲ್ಲೆಯ 34 ಪೊಲೀಸ್ ಠಾಣೆಗಳಲ್ಲಿ ಮಕ್ಕಳ ಕಲ್ಯಾಣ ಕಾರ್ಯಪಡೆ ರಚನೆ ಹಾಗೂ ಮಕ್ಕಳ ಆರೋಗ್ಯ, ಶಿಕ್ಷಣ, ರಕ್ಷಣೆಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಮಕ್ಕಳ ಸ್ನೇಹಿ ಜಿಲ್ಲೆಯಾಗಿಸಲು ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡಲು ಸೂಚಿಸಿದ್ದು, ಬಂದರು, ಧಾರ್ಮಿಕ ಸ್ಥಳಗಳಲ್ಲಿ ಭಿಕ್ಷೆ ಬೇಡುವ ಮಕ್ಕಳ ರಕ್ಷಣೆಗೆ ಒತ್ತು ನೀಡುವಂತೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ ಆನಂದ್‌, ‘ದೇಶದಲ್ಲಿ 200ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ನೇರವಾಗಿ ಸಂಪರ್ಕ ಸಾಧಿಸಿದ್ದು, ಆಯಾ ಜಿಲ್ಲೆಗಳಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ ಎಂದರು.

ಮಕ್ಕಳ ಹಕ್ಕುಗಳ ರಕ್ಷಣೆ, ಆರೋಗ್ಯದ ಬಗ್ಗೆ ಕಾಳಜಿ, ಮಾನಸಿಕ ಹಾಗೂ ಸಾಮಾಜಿಕ ಸ್ವಾಸ್ಥ್ಯಕ್ಕೆ ಒತ್ತು, ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ, ಮಕ್ಕಳ ಮೇಲಿನ ದೌರ್ಜನ್ಯ, ಶೋಷಣೆ ತಡೆ ಹಾಗೂ ಪರಿಣಾಮಕಾರಿಯಾಗಿ ಕಡ್ಡಾಯ ಶಿಕ್ಷಣ ಹಕ್ಕುಗಳ ಕಾಯ್ದೆ ಅನುಷ್ಠಾನ ವಿಚಾರಗಳು ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ವ್ಯಾಪ್ತಿಗೊಳಪಡುತ್ತವೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಎಸ್‌ಪಿ ಕುಮಾರಚಂದ್ರ ಇದ್ದರು.

ಸಂವೇದನಾ ಸಹಾಯವಾಣಿ

ಕೋವಿಡ್‌ ಸೋಂಕಿತ ಹಾಗೂ ಬಾಧಿತ ಮಕ್ಕಳಿಗೆ ನೆರವು ನೀಡಲು ಸಂವೇದನಾ ಸಹಾಯವಾಣಿ ತೆರೆಯಲಾಗಿದ್ದು, 18001212830 ನಂಬರ್‌ಗೆ ಕರೆ ಮಾಡಿ ನೆರವು ಪಡೆಯಬಹುದು. ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಸಹಾಯವಾಣಿ ಕಾರ್ಯ ನಿರ್ವಹಿಸಲಿದೆ. ಮಕ್ಕಳಿಗೆ ಹಾಗೂ ಪೋಷಕರಿಗೆ ಕೌನ್ಸೆಲಿಂಗ್ ನೀಡಲಾಗುವುದು ಎಂದು ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಆನಂದ್ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.