ADVERTISEMENT

ಪಳ್ಳಿ : ಫಿಶ್ ಮೀಲ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 8:43 IST
Last Updated 25 ಫೆಬ್ರುವರಿ 2026, 8:43 IST
ಕಾರ್ಕಳ ತಾಲ್ಲೂಕಿನ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಫಿಷ್ ಮೀಲ್ ಘಟಕವನ್ನು ವಿರೋಧಿಸಿ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು
ಕಾರ್ಕಳ ತಾಲ್ಲೂಕಿನ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಫಿಷ್ ಮೀಲ್ ಘಟಕವನ್ನು ವಿರೋಧಿಸಿ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಪ್ರತಿಭಟನೆ ನಡೆಸಿದರು   

ಕಾರ್ಕಳ: ತಾಲ್ಲೂಕಿನ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಫಿಷ್ ಮೀಲ್ ಘಟಕವನ್ನು ವಿರೋಧಿಸಿ ಸೋಮವಾರ ಪಂಚಾಯಿತಿ ಸದಸ್ಯರ ನೇತೃತ್ವದಲ್ಲಿ ಗ್ರಾಮಸ್ಥರು ಪಳ್ಳಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಪಳ್ಳಿ ಗ್ರಾಮದಲ್ಲಿ ಸ್ಥಾಪಿಸಲಾಗುತ್ತಿರುವ ಈ ಫಿಷ್ ಮೀಲ್ ಘಟಕವನ್ನು ಸಂಪೂರ್ಣವಾಗಿ ಬಂದ್ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಪಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಿಮಲೆ ಪರಿಸರದ ಕಂದಾಯ ಸ.ನಂ. 229/1ರ 3.60 ಎಕ್ರೆ ಜಾಗದಲ್ಲಿ ಈ ಘಟಕ ನಿರ್ಮಾಣವಾಗುತ್ತಿದ್ದು, ಅಧಿಕೃತ ಪರವಾನಗಿ ಪಡೆಯದೆ ಕಾಮಗಾರಿ ನಡೆಸಲಾಗುತ್ತಿದೆ ಎಂಬ ದೂರು ಕೇಳಿ ಬಂದಿದೆ.

ADVERTISEMENT

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರದೀಪ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಮೀಳಾ ನಾಯಕ್, ಗ್ರಾಮ ಲೆಕ್ಕಾಧಿಕಾರಿ ಅಭಿಷೇಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿದ ತಹಶೀಲ್ದಾರರು ಫಿಷ್ ಮೀಲ್ ಘಟಕವನ್ನು ಸ್ಥಳಾಂತರಿಸುವ ಕುರಿತು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪಳ್ಳಿ ಪಂಚಾಯಿತಿ ಮಾಜಿ ಸದಸ್ಯ ಶ್ರೀಕಾಂತ್ ಪ್ರಭು ಮಾತನಾಡಿ, ಅಧಿಕಾರಿಗಳ ಸ್ಥಳ ಪರಿಶೀಲನೆ ವೇಳೆ ಭೂಪರಿವರ್ತನೆ, ಇ–ಖಾತಾ ಅಥವಾ ಗ್ರಾಮ ಪಂಚಾಯಿತಿಯಿಂದ ಕಟ್ಟಡ ಪರವಾನಗಿ ಪಡೆಯದೆ ಕಾಮಗಾರಿ ನಡೆಸುತ್ತಿರುವುದು ಕಂಡುಬಂದಿದೆ. ಕೃಷಿ ಉದ್ದೇಶದ ಬಾವಿಗೆ ನೀಡಲಾಗಿದ್ದ ವಿದ್ಯುತ್ ಸಂಪರ್ಕವನ್ನು ಅಕ್ರಮವಾಗಿ ಈ ಕಟ್ಟಡ ನಿರ್ಮಾಣಕ್ಕೆ ಬಳಸುತ್ತಿರುವುದು ದೃಢಪಟ್ಟಿದೆ. ಜಮೀನಿನಲ್ಲಿದ್ದ ಮರಗಳನ್ನು ಅನುಮತಿ ಇಲ್ಲದೆ ಅಕ್ರಮವಾಗಿ ತೆರವುಗೊಳಿಸಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದರು. 

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸುವಂತೆ ನಿರ್ಮಾಣದ ಉಸ್ತುವಾರಿ ವಹಿಸಿದ್ದವರಿಗೆ ಅಧಿಕೃತ ನೋಟೀಸ್‌ ಜಾರಿ ಮಾಡಿದ್ದಾರೆ. ನಿಯಮಬಾಹಿರವಾಗಿ ಬಳಸುತ್ತಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಮೆಸ್ಕಾಂ ಬೈಲೂರು ಶಾಖಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದರು.

ಪಳ್ಳಿ ಪಂಚಾಯಿತಿಯ ಮಾಜಿ ಪ್ರತಿನಿಧಿ ಉಷಾ ಎ. ಅಂಚನ್, ಸಂದೀಪ್ ಅಮೀನ್, ವಿಜಯ್ ಎಂ. ಶೆಟ್ಟಿ, ಸಂತೋಷ್ ಶೆಟ್ಟಿ ನಿಂಜೂರು, ಕೌಡೂರು ಪಂಚಾಯಿತಿ ಮಾಜಿ ಪ್ರತಿನಿಧಿ ವಿಶೇಷ್ ದೇವಾಡಿಗ, ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.