ಉಡುಪಿ: ಮಹಿಳೆಯರು ಸ್ವಾವಲಂಬಿಗಳಾಗಿ ಆದಾಯಗಳಿಸುವುದರಿಂದ ಮನೆ ಬೆಳಗುತ್ತದೆ ಮತ್ತು ಸಮಾಜ ಬೆಳೆಯುತ್ತದೆ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವಿಜಯ ಕುಮಾರ್ ಹೇಳಿದರು.
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಉಡುಪಿ ತಾ.ಪಂ. ಕಟ್ಟಡದಲ್ಲಿರುವ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳಿಗೆ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ಮಾರುಕಟ್ಟೆ ಕಲ್ಪಿಸುವ ಕಾರ್ಯ ಮಾಡಲಾಗುತ್ತಿದೆ. ಇಲ್ಲಿನ ಉತ್ಪನ್ನಗಳನ್ನು ಬ್ರ್ಯಾಂಡ್ ರೀತಿಯಲ್ಲಿ ಪ್ರಚಾರ ಮಾಡಬೇಕಾದ ಅಗತ್ಯ ಇದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಆಕರ್ಷಿಸಬೇಕು ಎಂದರು.
ಉಡುಪಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಸರ್ಕಾರ ಮಹಿಳೆಯರಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಇಲ್ಲಿನ ಉತ್ಪನ್ನಗಳು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಅಗತ್ಯವಾಗಿ ಮಾಡಬೇಕು. ಆ ಮೂಲಕ ತಮ್ಮದೇ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಬಹುದಾಗಿದೆ ಎಂದರು.
ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ತಾ.ಪಂ. ವ್ಯವಸ್ಥಾಪಕಿ ಫರ್ಯಾನ, ಸ್ವರ್ಣ ಸಂಜೀವಿನಿ ಉಡುಪಿ ತಾಲ್ಲೂಕು ಒಕ್ಕೂಟದ ಅಧ್ಯಕ್ಷೆ ಸುಲೋಚನಾ ಕುಂದರ್, ಗೀತಾ ಪಾಲನ್ ಇದ್ದರು.
ಅಂಬಲಪಾಡಿ ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಐರಿನ್ ಅಂದ್ರಾದೆ ಸ್ವಾಗತಿಸಿದರು. ಕಾರ್ಯದರ್ಶಿ ಸೌಮ್ಯ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.