ADVERTISEMENT

ಉಡುಪಿ | ವಿಶ್ವ ಹೃದಯ ದಿನ: ಪತ್ರಕರ್ತರಿಗೆ ಸಿಪಿಆರ್ ತರಬೇತಿ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2025, 4:06 IST
Last Updated 30 ಸೆಪ್ಟೆಂಬರ್ 2025, 4:06 IST
ಪತ್ರಕರ್ತರಿಗೆ ಸಿಪಿಆರ್ ತರಬೇತಿ ನೀಡಲಾಯಿತು
ಪತ್ರಕರ್ತರಿಗೆ ಸಿಪಿಆರ್ ತರಬೇತಿ ನೀಡಲಾಯಿತು   

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಜಿಲ್ಲೆಯ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲ ಜೀವ ರಕ್ಷಣೆ (ಬಿಎಲ್‌ಎಸ್) ಮತ್ತು ಸಿಪಿಆರ್ ತರಬೇತಿ ಕಾರ್ಯಕ್ರಮವನ್ನು ಉಡುಪಿ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೃದ್ರೋಗ ತಜ್ಞೆ ಡಾ.ಮೋನಿಕಾ ಜೆ. ಮಾತನಾಡಿ, ಯುವಜನರಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸಲು ಧೂಮಪಾನ, ಜೆನೆಟಿಕ್ ಹಾಗೂ ಒತ್ತಡವೇ ಮುಖ್ಯ ಕಾರಣ. ಕೊರೋನಾ ಸೇರಿದಂತೆ ಎಲ್ಲ ರೀತಿಯ ವೈರಸ್‌ಗಳು ಕೂಡ ಹೃದಯಕ್ಕೆ ಅಪಾಯ ತಂದೊಡ್ಡುತ್ತದೆ. ಕೊರೋನಾ ಲಸಿಕೆಯಿಂದ ಹೃದಯಾಘಾತಗಳು ಸಂಭವಿಸುವುದು ಈವರೆಗೆ ಸಾಬೀತಾಗಿಲ್ಲ ಎಂದು ತಿಳಿಸಿದರು.

ಆಸ್ಪತ್ರೆಯ ತುರ್ತು ವೈದ್ಯಕೀಯ ಸಲಹೆಗಾರ ಡಾ.ಆಕಾಶ್ ಕಲ್ಲೂರೆ ಮತ್ತು ಅವರ ತಂಡವು ಬಿಎಲ್‌ಎಸ್ ಮತ್ತು ಸಿಪಿಆರ್‌ನ ಪ್ರಾಯೋಗಿಕ ತರಬೇತಿಯನ್ನು ನೀಡಿ, ಹೃದಯಾಘಾತ, ರಸ್ತೆ ಅಪಘಾತಗಳು ಮತ್ತು ಪಾರ್ಶ್ವವಾಯುಗಳಂತಹ ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ತಕ್ಷಣದ ಪ್ರತಿಕ್ರಿಯೆಯ ನಿರ್ಣಾಯಕ ಪಾತ್ರದ ಕುರಿತು ಮಾತನಾಡಿದರು.

ADVERTISEMENT

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಮೋಹನ್ ಶೆಟ್ಟಿ ಮಾತನಾಡಿ, ವಿಶ್ವ ಹೃದಯ ದಿನದ ಪ್ರಯುಕ್ತ ಆಸ್ಪತ್ರೆಯು ಪೊಲೀಸ್ ಸಿಬ್ಬಂದಿ, ಆಂಬ್ಯುಲೆನ್ಸ್ ಚಾಲಕರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಮೆಸ್ಕಾಮ್ ಉದ್ಯೋಗಿಗಳು ಸೇರಿದಂತೆ ವಿವಿಧ ಸಾರ್ವಜನಿಕ ಸೇವಾನಿರತರಿಗೆ ಇದೇ ರೀತಿಯ ತರಬೇತಿಗಳನ್ನು ನೀಡುತ್ತಿದೆ ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಖಜಾಂಚಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಹೀಂ ಉಜಿರೆ ನಿರೂಪಿಸಿದರು. ಕಾರ್ಯಕ್ರಮದ ಭಾಗವಾಗಿ ಪತ್ರಕರ್ತರಿಗೆ ಉಚಿತ ರಕ್ತದೊತ್ತಡ ತಪಾಸಣೆ, ರಕ್ತ ಪರೀಕ್ಷೆ ಮತ್ತು ಇಸಿಜಿ ತಪಾಸಣೆಗಳನ್ನು ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.