ADVERTISEMENT

ಯುವಜನರು ನಾಯಕತ್ವ ಗುಣ ಬೆಳೆಸಿಕೊಳ್ಳಿ: ಬಸ್ರೂರು ರಾಜೀವ್ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 7:38 IST
Last Updated 13 ಫೆಬ್ರುವರಿ 2026, 7:38 IST
ಶಿಬಿರವನ್ನು ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು
ಶಿಬಿರವನ್ನು ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು   

ಉಡುಪಿ: ಸಮಾಜದಲ್ಲಿ ಯಾವುದೇ ಕಾರ್ಯ ನಿರ್ವಹಿಸಬೇಕಾದರೆ ನಾಯಕತ್ವ ಗುಣ ಅತೀ ಮುಖ್ಯವಾಗಿರುತ್ತದೆ. ದೇಶದಲ್ಲಿ 18 ರಿಂದ 35 ವರ್ಷದೊಳಗಿನ ಯುವಜನರ ಸಂಖ್ಯೆಯು ಸುಮಾರು ಶೇ 60-65 ರಷ್ಟು ಇದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಯುವ ಸಮುದಾಯವು ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುವಂತಾಗಬೇಕು ಎಂದು ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು.

ಬ್ರಹ್ಮಗಿರಿಯ ಭಾರತೀಯ ರೆಡ್‌ಕ್ರಾಸ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್‌ಕ್ರಾಸ್ ಘಟಕದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯುವಜನರಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಕೌಶಲಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ವ್ಯಕ್ತಿತ್ವ ವಿಕಸನ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.

ಸೃಜನಶೀಲತೆಯು ಪ್ರತಿಯೊಬ್ಬ ವ್ಯಕ್ತಿಯಲ್ಲಿ ಅಂತರ್ಗತವಾಗಿರುತ್ತದೆ. ಆ ಶಕ್ತಿಯನ್ನು ಹೊರಸೂಸಲು ಪರಿಣಾಮಕಾರಿ ತರಬೇತಿ ಅಗತ್ಯವಾಗಿದೆ. ತರಬೇತಿಯಿಂದ ಸೃಜನಶೀಲತೆಯು ಪಕ್ವಗೊಳ್ಳುತ್ತದೆ ಎಂದು ಹೇಳಿದರು.

ADVERTISEMENT

ಸಮಾಜಕ್ಕೆ ಒಳಿತು ಮಾಡುವ, ಇತರರ ಕಷ್ಟಗಳಿಗೆ ಸ್ಪಂದಿಸುವ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಉತ್ತಮ ಸಂವಹನ ಕೌಶಲ ಹೊಂದುವುದರೊಂದಿಗೆ ಸರಿ ತಪ್ಪುಗಳನ್ನು ಧೈರ್ಯವಾಗಿ ಹೇಳುವ, ಎಲ್ಲರೊಂದಿಗೂ ಮುಕ್ತವಾಗಿ ಬೆರೆಯುವ ಗುಣವನ್ನು ನಾಯಕನಾದವರು ಹೊಂದಿರಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ.ಗಾಂವಕರ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಡಾ. ವಿವೇಕಾನಂದ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ್, ಸಂಪನ್ಮೂಲ ವ್ಯಕ್ತಿಗಳಾದ ಎಸಿಟಿ ಕೇಂದ್ರ ಹುಬ್ಬಳ್ಳಿಯ ಮುಖ್ಯಸ್ಥೆ ಯಶವಂತಿ, ರೆಡ್‌ಕ್ರಾಸ್ ಹಾಗೂ ಡಿಡಿಆರ್‌ಸಿ ಸಿಬ್ಬಂದಿ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರೆಡ್‌ಕ್ರಾಸ್ ಘಟಕದ ಗೌರವ ಕಾರ್ಯದರ್ಶಿ ಗಣನಾಥ ಎಕ್ಕಾರು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.