
ಉಡುಪಿ: ಕೊಕ್ಕರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟಂಬೈಲಿನಲ್ಲಿ ₹ 2 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಕಳಪೆಯಾಗಿದ್ದರೂ ಗುತ್ತಿಗೆದಾರನ ವಿರುದ್ಧ ಕ್ರಮ ತೆಗೆದುಕೊಳ್ಳದೆ, ಕಾಮಗಾರಿಯ ಬಿಲ್ ಪಾವತಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಜನಾರ್ದನ ತೋನ್ಸೆ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ, ಅಕ್ರಮ ಎಸಗಿದ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಹಲವು ಬಾರಿ ಒತ್ತಾಯಿಸಿದರೂ ಕ್ರಮ ಕೈಗೊಂಡಿಲ್ಲ. ಜಿಲ್ಲಾ ಪಂಚಾಯಿತಿಗೆ ಕ್ರಮ ತೆಗೆದುಕೊಳ್ಳುವ ಅಧಿಕಾರ ಇಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಅಧಿಕಾರಿಗಳು, ಜನಪ್ರತಿನಿಧಿಗಳು ಹಲವು ಬಾರಿ ಕಾಮಗಾರಿ ಸ್ಥಳಕ್ಕೆ ಭೇಟಿನೀಡಿ ವರದಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಕ್ರಿಯಿಸಿದ ಅಧ್ಯಕ್ಷ ದಿನಕರ ಬಾಬು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್, ಅವ್ಯವಹಾರ ಸಂಬಂಧ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಜಿಲ್ಲಾ ಪಂಚಾಯಿತಿಗೆ ಕ್ರಮತೆಗೆದುಕೊಳ್ಳುವ ಅಧಿಕಾರವಿಲ್ಲ. ಸರ್ಕಾರದ ಮಟ್ಟದಲ್ಲಿ ಕ್ರಮ ಜರುಗಿಸಬೇಕು ಎಂದರು.
ಹಾವಂಜೆ, ಉಪ್ಪೂರು ಭಾಗಗಳಲ್ಲಿ ಮಂಗಗಳ ಕಾಟ ವಿಪರೀತವಾಗಿದೆ. ಹಂದಿಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದ ಗೆಣಸುಗಳು ಹಂದಿಗಳ ಪಾಲಾಗುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸದಸ್ಯರಾದ ಜ್ಯೋತಿ ಹರೀಶ್, ಜನಾರ್ದನ ತೋನ್ಸೆ ಸೇರಿದಂತೆ ಹಲವರು ಅಸಮಾಧಾನ ವ್ಯಕ್ತಪಡಿಸಿದರು.
ಕಾಡು ಪ್ರಾಣಿಗಳ ಹಾವಳಿ ತಡೆಗೆ 246 ಎಕರೆ ಪ್ರದೇಶದಲ್ಲಿ ಸ್ಥಳೀಯ ಹಣ್ಣುಗಳನ್ನು ಬಿಡುವ ಗಿಡಗಳನ್ನು ಬೆಳೆಸಲಾಗುತ್ತಿದೆ. ಕಳೆದ ವರ್ಷ ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೊಳಗಾದವರಿಗೆ ₹ 27 ಲಕ್ಷ ಪರಿಹಾರ ನೀಡಲಾಗಿದೆ ಎಂದು ಕುಂದಾಪುರ ವಲಯ ಅರಣ್ಯ ಉಪ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ತಿಳಿಸಿದರು.
ಕಪ್ಪುಪಟ್ಟಿಗೆ ಸೇರಿಸಿ:
ಹಾವಂಜೆ ಹಾಗೂ ಉಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಬಾವಿಗಳ ಕಾಮಗಾರಿ ಅಪೂರ್ಣ ಹಾಗೂ ಕಳಪೆಯಾಗಿದೆ. ಬೇಸಗೆಯಲ್ಲಿ ನೀರಿಗಾಗಿ ಜನರು ಪರದಾಡುತ್ತಿದ್ದಾರೆ. ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಬೇಕು, ಎಂಜಿನಿಯರ್ ವಿರುದ್ಧ ಕ್ರಮ ಜರುಗಿಸಬೇಕು. ಇದರಿಂದ ಉಳಿದವರು ಎಚ್ಚೆತ್ತುಕೊಳ್ಳಲಿದ್ದಾರೆ ಎಂದು ಸದಸ್ಯ ಜನಾರ್ದನ ತೋನ್ಸೆ ಒತ್ತಾಯಿಸಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಇದ್ದರು.
***
‘ಗುತ್ತಿಗೆದಾರನಿಗೆ ಬಿಲ್ ಪಾವತಿಸಿ’
ಸಿದ್ದಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾವಿ ನಿರ್ಮಿಸಿದ ಗುತ್ತಿಗೆದಾರನಿಗೆ ಕೆಆರ್ಐಡಿಎಲ್ ಅಧಿಕಾರಿಗಳು ಬಾಕಿ ಬಿಲ್ ಬಿಡುಗಡೆ ಮಾಡುತ್ತಿಲ್ಲ. ಕಾಮಗಾರಿ ಮುಗಿದು ವರ್ಷಗಳು ಕಳೆದರೂ ಬಿಲ್ ಬಿಡುಗಡೆ ಮಾಡದಿರಲು ಕಾರಣ ಏನು ಎಂದು ಸದಸ್ಯ ರೋಹಿತ್ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೆಆರ್ಐಡಿಎಲ್ ಅಧಿಕಾರಿ ಬಾವಿಯಲ್ಲಿ ನೀರಿನ ಮಟ್ಟ ಕಡಿಮೆ ಇದೆ ಎಂಬ ದೂರುಗಳ ಬಂದ ಹಿನ್ನೆಲೆಯಲ್ಲಿ ಖುದ್ದು ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ. ಜತೆಗೆ, ಐಟಿಡಿಪಿ ಇಲಾಖೆಯಿಂದ 2ನೇ ಹಂತದ ಹಣ ಬಿಡುಗಡೆಯಾಗದ ಕಾರಣ ಬಿಲ್ ಪಾವತಿಸಿಲ್ಲ ಎಂದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸದಸ್ಯ ರೋಹಿತ್, ಹಣ ಬಿಡುಗಡೆ ಮಾಡದಿರುವುದಕ್ಕೆ ವೈಯಕ್ತಿಕ ದ್ವೇಷ ಕಾರಣ. ಐಟಿಡಿಪಿಯಿಂದ ₹ 7.5 ಲಕ್ಷ ಬಿಡುಗಡೆಯಾಗಿದ್ದರೂ ಗುತ್ತಿಗೆದಾರನಿಗೆ ಬಿಲ್ ಕೊಡದಿರುವುದರ ಉದ್ದೇಶ ಏನು ಎಂದು ಹರಿಹಾಯ್ದರು. ಸಿಇಒ ಮಧ್ಯೆ ಪ್ರವೇಶಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಸರ್ವೆ ಕಾರ್ಯ ಸ್ಥಗಿತ
ಜಿಲ್ಲೆಯಲ್ಲಿ ಮೂರು ತಿಂಗಳಿಂದ ಸರ್ವೆ ಕಾರ್ಯ ಸ್ಥಗಿತವಾಗಿದೆ. ಸರ್ವೆಗೆ ಅರ್ಜಿ ಹಾಕಿದವರು ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ ಎಂದು ಸದಸ್ಯ ಸಮಿತಿ ಶೆಟ್ಟಿ, ರೇಷ್ಮಾ ಉದಯಶೆಟ್ಟಿ ವಿಷಯ ಪ್ರಸ್ತಾಪಿಸಿದರು. ಪ್ರತಿಕ್ರಿಯೆ ನೀಡಿದ ಅಧಿಕಾರಿ ಜಿಲ್ಲೆಯಲ್ಲಿರುವ 51 ಅಧಿಕೃತ ಪರವಾನಗಿ ಸರ್ವೆಯರ್ಗಳು ಎರಡೂವರೆ ತಿಂಗಳಿನಿಂದ ಹಲವು ಬೇಡಿಕೆಗಳ ಈಡೇರಿಕೆಗೆ ಮುಷ್ಕರ ನಡೆಸುತ್ತಿರುವ ಕಾರಣ 10,000ಕ್ಕೂ ಹೆಚ್ಚು ಅರ್ಜಿಗಳು ಬಾಕಿ ಉಳಿದಿವೆ. ಮುಷ್ಕರ ನಿರತರ ಸಮಸ್ಯೆ ಬಗೆಹರಿದ ಕೂಡಲೇ ಸರ್ವೆ ಕಾರ್ಯ ಚುರುಕಾಗಲಿದೆ ಎಂದರು. ಅಧಿಕಾರಿಯ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯರು, ಎರಡೂವರೆ ತಿಂಗಳಿನಿಂದ ಬದಲಿ ವ್ಯವಸ್ಥೆ ಏಕೆ ಮಾಡಿಲ್ಲ. ಜನಸಾಮಾನ್ಯರು ಆಸ್ತಿ ಮಾರಲಾಗದೆ ಸಂಕಟ ಅನುಭವಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.