ಶಿರಸಿ: ರಾಜ್ಯದಲ್ಲಿ ಮಕ್ಕಳ ಶಿಕ್ಷಣ ಹಕ್ಕು ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಪ್ರಶಂಸೆ ದೊರೆತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ತಾಲ್ಲೂಕಿನ ಯಡಳ್ಳಿ ವಿದ್ಯೋದಯ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿರುವ ಶಿರಸಿ ಹಾಗೂ ಸಿದ್ದಾಪುರ ತಾಲ್ಲೂಕು ವ್ಯಾಪ್ತಿಯ ಶಾಲೆಗಳ ಎರಡು ದಿನಗಳ ಇನ್‌ಸ್ಪೈರ್ ಅವಾರ್ಡ್ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
`ರಾಜ್ಯದಲ್ಲಿ ಅನುಷ್ಠಾನಗೊಂಡಿರುವ ಮಕ್ಕಳ ಶಿಕ್ಷಣ ಹಕ್ಕು ಕಾಯಿದೆ ಕುರಿತು ತಜ್ಞರೊಂದಿಗೆ ವಿಶೇಷ ಚರ್ಚೆ ನಡೆಸಿ ಅನೇಕ ಮಾಹಿತಿ ಸಂಗ್ರಹಿಸಲಾಗಿದೆ~ ಎಂದರು.
`ಬಿಜೆಪಿ ಆಡಳಿತದಲ್ಲಿ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಆದರೆ ಬ್ರಿಟಿಷ್ ಶಿಕ್ಷಣ ಪದ್ಧತಿಯಿಂದ ಭಾರತೀಯರು ಕುರಿ ಗುಂಪಿನ ಮಧ್ಯದಲ್ಲಿರುವ ಸಿಂಹದ ಮರಿಯಾಗಿ ಬೆಳೆಯುತ್ತಿದ್ದಾರೆ. ಉದ್ಯೋಗಕ್ಕಾಗಿ ಶಿಕ್ಷಣಕ್ಕಿಂತ ಜೀವನ ಮಾರ್ಗದರ್ಶನ ಮಾಡುವ ಶಿಕ್ಷಣ ಅಗತ್ಯವಾಗಿದೆ.
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೆ ಸಾಕಷ್ಟು ಪ್ರೋತ್ಸಾಹ ನೀಡಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬಲಪಡಿಸುವ ನಿಟ್ಟಿನಲ್ಲಿ ಇನ್‌ಸ್ಪೈರ್ ಅವಾರ್ಡ್‌ನಂತಹ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗುತ್ತಿದೆ. ವಿಜ್ಞಾನ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನದ ಕುರಿತು ಆಸಕ್ತಿ ಬೆಳೆಸುವ ಕಾರ್ಯ ಮಾಡಬೇಕಿದೆ~ ಎಂದರು.
ಈ ಸಂದರ್ಭದಲ್ಲಿ ಸಚಿವರು ಸರ್ಕಾರ ನೀಡುವ ಉಚಿತ ಸೈಕಲ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ಶಾಸಕ ವಿ.ಎಸ್. ಪಾಟೀಲ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಮಂಗಲಾ ಭಟ್ಟ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಆರ್.ಡಿ. ಹೆಗಡೆ, ಶೋಭಾ ನಾಯ್ಕ, ತಾ.ಪಂ. ಸದಸ್ಯೆ ನೇತ್ರಾವತಿ ಹೆಗಡೆ, ಯಡಳ್ಳಿ ವಿದ್ಯೋದಯ ಶಿಕ್ಷಣ ಸಂಸ್ಥೆಯ ಎಂ.ವಿ.ಹೆಗಡೆ, ಜಿ.ಆರ್.ಹೆಗಡೆ, ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ವೈ.ಟಿ. ಗುರುಮೂರ್ತಿ, ಕಾಲೇಜಿನ ಪ್ರಾಚಾರ್ಯ ಬಿ.ಬಿ.ಕುಂದರಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್ ಹೆಗಡೆ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.