ADVERTISEMENT

ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 10:40 IST
Last Updated 4 ಅಕ್ಟೋಬರ್ 2012, 10:40 IST

ಕಾರವಾರ: ಜಿಲ್ಲಾ ಕೇಂದ್ರದಲ್ಲಿಯೇ ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕಾರವಾರ ಹಾಗೂ ಅಂಕೋಲಾ ತಾಲ್ಲೂಕಿನ 50ಕ್ಕೂ ಹೆಚ್ಚು ಸಂಘಟನೆಗಳು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ನೇತೃತ್ವದಲ್ಲಿ ಅವರಿಗೆ ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದವು.

1865ರಲ್ಲಿ ನಿರ್ಮಾಣ ಆಗಿರುವ ಇಲ್ಲಿಯ ಜಿಲ್ಲಾ ಆಸ್ಪತ್ರೆಯಲ್ಲಿ ಭವಿಷ್ಯದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಬೇಕು ಎಂದು ಜಮೀನು ಕಾಯ್ದಿಡಲಾಗಿದೆ. ಆಸ್ಪತೆಯ ಆವರಣದಲ್ಲಿ ಒಟ್ಟು 23 ಎಕರೆ ಜಮೀನು ಇದೆ. 450 ಹಾಸಿಗೆ ಮತ್ತು ಮೂಲಭೂತ ಸೌಲಭ್ಯಗಳಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಭಟ್ಕಳ ಶಾಸಕ ಜೆ.ಡಿ.ನಾಯ್ಕ, ಹಳಿಯಾಳ ಶಾಸಕ ಜೆ.ಡಿ.ನಾಯ್ಕ, ಕುಮಟಾ ಶಾಸಕ ದಿನಕರ ಶೆಟ್ಟಿ, ವಿಧಾನಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ್ ಅವರು ಜಿಲ್ಲಾ ಕೇಂದ್ರದಲ್ಲಿಯೇ ಕಾಲೇಜು ಸ್ಥಾಪನೆ ಆಗಬೇಕು ಎಂದು ಆಗ್ರಹಿಸಿದ್ದಾರೆ ಎಂದು ಸಮಿತಿ ಮನವಿಯಲ್ಲಿ ಹೇಳಿದೆ.

ತಾಲ್ಲೂಕಿನಲ್ಲಿ ಎರಡು ಜಲ ವಿದ್ಯುತ್ ಯೋಜನೆ, ಕೈಗಾ ಅಣು ವಿದ್ಯುತ್ ಸ್ಥಾವರ, ಸೀಬರ್ಡ್ ನೌಕಾನೆಲೆ ಯೋಜನೆಗಳಿವೆ. ಈ ಯೋಜನೆಗಳಿಂದ ಭವಿಷ್ಯದಲ್ಲಿ ಅಪಾಯ ಸಂಭವಿಸಿದ್ದಲ್ಲಿ ಚಿಕಿತ್ಸೆ ನೀಡಲು ಸುಸಜ್ಜಿತ ಆಸ್ಪತ್ರೆಗಳಿಲ್ಲ. ಯೋಜನೆಗಳಿಂದ ಆವರಿಸಿರುವ ಜಿಲ್ಲಾ ಕೇಂದ್ರದಲ್ಲಿಯೇ ಸರ್ಕಾರ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ.

ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸಬೇಕಾಗಿರುವ ವೈದ್ಯಕೀಯ ಕಾಲೇಜನ್ನು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಶಿರಸಿಗೆ ಸ್ಥಳಾಂತರ ಮಾಡುವ ಪ್ರಯತ್ನ ನಡೆಸಿದ್ದಾರೆ. ಇದು ಖಂಡನೀಯ. ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಸಮಿತಿ ದೂರಿದೆ.

ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಭಾರತೀಯ ವೈದ್ಯಕೀಯ ಮಂಡಳಿಗೆ ಪ್ರಸ್ತಾವ ಕಳುಹಿಸುವಾಗ ಕಾರವಾರದಲ್ಲಿಯೇ ಕಾಲೇಜು ಮಾಡಬೇಕು ಎನ್ನುವ ಅಂಶವನ್ನು ಸ್ಪಷ್ಟವಾಗಿ ತಿಳಿಸಬೇಕು ಎಂದು ಸಮಿತಿ ಮನವಿ ಮಾಡಿಕೊಂಡಿದೆ.

ಸಮಿತಿಯ ಸಂಚಾಲಕ ನಾಗರಾಜ ನಾಯಕ, ಮಾಜಿ ಸಚಿವ ಪ್ರಭಾಕರ ರಾಣೆ, ವಕೀಲ ಕೆ.ಆರ್.ದೇಸಾಯಿ, ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾ ನಾಯ್ಕ, ಬಾಬು ಶೇಖ್, ಕಾಂಗ್ರೆಸ್ ಮುಖಂಡ ರಮಾನಂದ ನಾಯಕ, ಡಾ. ಸಂಜು ನಾಯಕ, ಡಾ. ಕೀರ್ತಿ ನಾಯ್ಕ, ಮೀನುಗಾರರ ಮುಖಂಡ ಗಣಪತಿ ಮಾಂಗ್ರೆ, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಎನ್.ದತ್ತಾ, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ದಿಲೀಪ ಅರ್ಗೇಕರ್,  ಬಿ.ಜಿ.ಮೋಹನ, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ, ಅನು ಕಳಸ, ರವೀಂದ್ರ ಅಮದಳ್ಳಿ, ಎಲಿಷಾ ಎಲಕಪಾಟಿ ಹಾಜರಿದ್ದರು.

ಆಗ್ರಹ: ವೈದ್ಯಕೀಯ ಕಾಲೇಜು ಜಿಲ್ಲಾ ಕೇಂದ್ರದಲ್ಲೇ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ಕಾರವಾರ ಛಾಯಾಚಿತ್ರಗಾರರ ಸಂಘ ಆಗ್ರಹಿಸಿದೆ.

ಈ ಕುರಿತು ಸಂಘದ ಅಧ್ಯಕ್ಷ ಸೂರಜ್ ಜೊಗಳೆಕರ್ ಪತ್ರಿಕಾ ಪ್ರಕಟಣೆ ನೀಡಿದ್ದು, ಸರ್ಕಾರ ರಾಜ್ಯದ 11 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲು ನಿರ್ಣಯ ಕೈಗೊಂಡಿರುವುದು ಸ್ವಾಗತಾರ್ಹ. ಉತ್ತರ ಜಿಲ್ಲೆ ಅಸ್ತಿತ್ವಕ್ಕೆ ಬಂದು 63 ವರ್ಷಗಳಾದರೂ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಇಲ್ಲದೇ ಇರುವುದರ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

63 ವರ್ಷಗಳ ನಂತರ ಸರ್ಕಾರ ವೈದ್ಯಕೀಯ ಕಾಲೇಜುನ್ನು ನಿರ್ಮಿಸಲು ಸರ್ಕಾರ ನಿರ್ಣಯ ಕೈಗೊಂಡಿದ್ದು ಕಾಲೇಜನ್ನು ಜಿಲ್ಲಾ ಕೇಂದ್ರದಲ್ಲಿಯೇ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ವೈದ್ಯಕೀಯ ಕಾಲೇಜು ಜಿಲ್ಲಾ ಕೇಂದ್ರದಲ್ಲಿಯೇ ನಿರ್ಮಿಸಲು ಸ್ಥಳೀಯ ಸಚಿವರಾಗಿರುವ ಆನಂದ ಅಸ್ನೋಟಿಕರ್ ಅವರು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅಧ್ಯಕ್ಷ ಜೊಗಳೇಕರ್ ಮನವಿ ಮಾಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.