ಶಿರಸಿ: ಮೂಲಸೌಕರ್ಯಗಳನ್ನು ಒದಗಿಸದೇ ಭ್ರಷ್ಟ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಡವರನ್ನು ಬೀದಿಗೆ ತರುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರೇಮಕುಮಾರ ನಾಯ್ಕ ಟೀಕಿಸಿದರು.
ಬನವಾಸಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಬುಧವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿ, ‘ಸಾರ್ವಜನಿಕರಿಗೆ ಅನುಕೂಲದ ನೆಪದಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಸಿದ್ದು ಮತ್ತು ಅಭಿವೃದ್ಧಿಗೆ ಆದ್ಯತೆ ನೀಡದೆ ಭ್ರಷ್ಟಾಚಾರಕ್ಕೆ ಮಣೆ ಹಾಕಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ’ ಎಂದರು.
‘ಬಡವರ ಪರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದು ಹೇಳುತ್ತ ಎಲ್ಲದರ ಬೆಲೆ ಹೆಚ್ಚಿಸಿದ್ದು ಜನಪರ ನೀತಿಯೇ? 23 ಲಕ್ಷ ಜನರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಪಡಿಸಿದ್ದು ಬಡವರಿಗೆ ನೀಡಿದ ನ್ಯಾಯದ ಗ್ಯಾರಂಟಿಯೇ’ ಎಂದು ಪ್ರಶ್ನಿಸಿದರು.
ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಮಾತನಾಡಿ, ‘ರಾಜ್ಯ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಜನಸಾಮಾನ್ಯರಿಂದ ಹಣ ಕಿತ್ತು, ಮಂತ್ರಿಗಳಿಗೆ, ಶಾಸಕರಿಗೆ ಕಾರು ಖರೀದಿಸಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಪದಾಧಿಕಾರಿಗಳಾದ ಶಿವಕುಮಾರ ದೇಸಾಯಿಗೌಡ, ಶಿರಸಿ ಗ್ರಾಮೀಣ ಮಂಡಳ ಅಧ್ಯಕ್ಷೆ ಉಷಾ ಹೆಗಡೆ, ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ ನಾಯ್ಕ, ಬನವಾಸಿ ಶಕ್ತಿಕೇಂದ್ರದ ಅಧ್ಯಕ್ಷ ಚಂದ್ರಶೇಖರ ಗೌಡ, ಮುಖಂಡರಾದ ರುದ್ರೇ ಗೌಡ, ಅರವಿಂದ್ ಶೆಟ್ಟಿ, ಭಾಶಿ ಶಂಕರ ಗೌಡ, ಶಾಂತಲಾ ಕಾನಳ್ಳಿ ಮಾತನಾಡಿದರು.
ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲು ಹಣವಿಲ್ಲದೇ ಜಿ.ಪಂ ತಾ.ಪಂ ಚುನಾವಣೆ ನಡೆಸುತ್ತಿಲ್ಲ. ಇದೇ ರೀತಿ ಮುಂದುವರಿದರೆ ಹೋರಾಟ ಅನಿವಾರ್ಯರಮೇಶ ನಾಯ್ಕ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.