
ಶಿರಸಿ: ‘ಕಾಂಗ್ರೆಸ್ ವಿಫಲತೆಯ ಕುರಿತು ಯಾರೊಬ್ಬರೂ ಧ್ವನಿ ಎತ್ತದಂತೆ, ಸಾರ್ವಜನಿಕರ ಧ್ವನಿ ಅಡಗಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ನಿರ್ಣಯದಿಂದ ಕಾಂಗ್ರೆಸ್ ನಾಶವಾಗಲಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಟೀಕಿಸಿದರು.
ನಗರದಲ್ಲಿ ಉಪವಿಭಾಗಾಧಿಕಾರಿ ಕಚೇರಿ ಎದುರು ಬುಧವಾರ ನಡೆದ ಬಿಜೆಪಿ ನಗರ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಾತನಾಡಿದರು.
‘ರಾಜ್ಯ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಭಾರತದ ಸಂವಿಧಾನಕ್ಕೆ ವಿರುದ್ಧವಿದೆ. ಇದು ನಾಗರಿಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಭವಿಷ್ಯದಲ್ಲಿ ಸರ್ಕಾರದ ವಿರುದ್ಧ ಯಾರೂ ಮಾತನಾಡದ ಸ್ಥಿತಿ ನಿರ್ಮಾಣ ಆಗಲಿದೆ’ ಎಂದರು.
ಪಕ್ಷದ ಜಿಲ್ಲಾ ಘಟಕದ ವಕ್ತಾರ ಸದಾನಂದ ಭಟ್ ಮಾತನಾಡಿ, ‘ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ ಆಗಿದೆ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳುತ್ತಿದೆ’ ಎಂದರು.
‘ಉದ್ದೇಶಿತ ಮಸೂದೆಯು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ಕಾಯ್ದೆ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ಕಾಯಿದೆ ನಮಗೆ ಬೇಕೇ? ಎಂಬ ಪ್ರಶ್ನೆ ಮೂಡಿದೆ. ಕಾರಣ ಈ ಮಸೂದೆ ಜಾರಿಗೆ ಅವಕಾಶ ನೀಡಬಾರದು’ ಎಂದು ಮನವಿ ಮೂಲಕ ಒತ್ತಾಯಿಸಿದರು.
ಉಪವಿಭಾಗಾಧಿಕಾರಿ ಕಾವ್ಯಾರಾಣಿ ಕೆ. ಮನವಿ ಸ್ವೀಕರಿಸಿದರು. ಪಕ್ಷದ ಪ್ರಮುಖರಾದ ಆನಂದ ಸಾಲೇರ, ಮಹಂತೇಶ ಹಾದಿಮನಿ, ಶರ್ಮಿಳಾ ಮಾದನಗೇರಿ, ವೀಣಾ ಶೆಟ್ಟಿ, ನಿರ್ಮಲಾ ಶೆಟ್ಟಿ, ನಂದನ ಸಾಗರ, ಅನಂತಮೂರ್ತಿ ಹೆಗಡೆ, ನವೀನ ಶೆಟ್ಟಿ, ಶ್ರೀಕಾಂತ ಬಳ್ಳಾರಿ, ಶ್ರೀನಿವಾಸ ಹೆಬ್ಬಾರ, ಆರ್.ವಿ.ಹೆಗಡೆ ಇದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸ್ವಕ್ಷೇತ್ರವಾದ ಮಂಕಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಲಿದೆ. ಇದು ಜಿಲ್ಲೆಯಲ್ಲಿ ಕಾಂಗ್ರೆಸ್ ವಿಫಲತೆಗೆ ಸಾಕ್ಷಿಯಾಗಿದೆಗುರುಪ್ರಸಾದ ಹೆಗಡೆ ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.