
ಶಿರಸಿ: ‘ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಾದಾಟವಿದ್ದರೂ ಬಿಜೆಪಿಗೆ ಸರ್ಕಾರ ರಚನೆಯಲ್ಲಿ ಆಸಕ್ತಿಯಿಲ್ಲ. ವಿರೋಧ ಪಕ್ಷವಾಗಿ ಇದ್ದುಕೊಂಡೇ ಆಡಳಿತ ಪಕ್ಷದ ಕಿವಿ ಹಿಂಡುತ್ತೇವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
‘ರಾಜ್ಯದಲ್ಲಿ ಪ್ರತಿ ದಿನ ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ಹೆಚ್ಚುತ್ತಿದೆ. ನನ್ನ ಮಾಹಿತಿ ಪ್ರಕಾರ, ಆಡಳಿತ ಪಕ್ಷದಲ್ಲಿ ಹಿರಿಯ ಸಚಿವರು, ಶಾಸಕರು ಸೇರಿ ಏಳೆಂಟು ಜನರು ಮುಖ್ಯಮಂತ್ರಿ ಆಗಲು ಪ್ರಯತ್ನ ನಡೆಸಿದ್ದಾರೆ. ಇದರ ಪರಿಣಾಮ ಆಡಳಿತ ಯಂತ್ರ ಕುಸಿದಿದೆ. ರಾಜ್ಯದಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ. ಬಿಜೆಪಿಯನ್ನು ವಿರೋಧ ಪಕ್ಷದಲ್ಲಿ ಕೂರಿಸಿದ್ದಾರೆ. ಅದನ್ನು ಸಮರ್ಪಕವಾಗಿ ನಿಭಾಯಿಸುತ್ತೇವೆ’ ಎಂದು ಅವರು ಸುದ್ದಿಗಾರರಿಗೆ ಸೋಮವಾರ ತಿಳಿಸಿದರು.
‘ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಭೆ ಮಾಡಲು ಸ್ವತಂತ್ರರು. ಅದನ್ನು ಟೀಕಿಸುವುದಿಲ್ಲ. ಆದರೆ ನಮ್ಮದು ರಾಷ್ಟ್ರೀಯ ಪಕ್ಷ. ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆಯ ತೀರ್ಮಾನವನ್ನು ವರಿಷ್ಠರು ಕೈಗೊಳ್ಳಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.