ಕಾರವಾರ: ‘ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರದ ವೇತನ ಮಾದರಿ ಅಳವಡಿಕೆ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದ್ದು, 2026–27ರ ಅಂತ್ಯದೊಳಗೆ ಇದು ಕಾರ್ಯರೂಪಕ್ಕೆ ಬರಬಹುದು’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು.
ಇಲ್ಲಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ಶನಿವಾರ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸ್‌ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ವೇತನವನ್ನು ₹25 ಸಾವಿರದಿಂದ ₹50 ಸಾವಿರಕ್ಕೆ ಏರಿಕೆ ಮಾಡಲು, ಹೊಸ ಪಿಂಚಣಿ ಯೋಜನೆ ಬದಲಾಗಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಲು ಸತತ ಪ್ರಯತ್ನ ಸಾಗಿದೆ’ ಎಂದರು.
‘ರಾಜ್ಯದ ನೌಕರರಿಗೆ ಮಿಲಿಟರಿ ಕ್ಯಾಂಟಿನ್ ಮಾದರಿಯಲ್ಲಿ ಶೇ 20 ರಿಂದ 25ರಷ್ಟು ರಿಯಾಯಿತಿ ದರದಲ್ಲಿ ಗೃಹಪಯೋಗಿ ವಸ್ತುಗಳು ಸೇರಿದಂತೆ ವಿವಿಧ ವಸ್ತುಗಳ ಖರೀದಿಗೆ ಎಂಎಸ್‌ಐಎಲ್ ಮುಖಾಂತರ ಕ್ಯಾಂಟೀನ್ ಯೋಜನೆ ರೂಪಿಸಲಾಗುತ್ತಿದೆ. ಸರ್ಕಾರಿ ನೌಕರರು ಕರ್ತವ್ಯದಲ್ಲಿರುವಾಗ ಮರಣ ಹೊಂದಿದರೆ ₹1 ಕೋಟಿ ವಿಮೆ ದೊರೆಯುವ ವೇತನ ಪ್ಯಾಕೇಜ್ ಜಾರಿಗೆ ತರಲಾಗಿದೆ’ ಎಂದರು.
‘ಪ್ರತಿ ವರ್ಷ 10 ಸಾವಿರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸಂಘ ಮಾಡುತ್ತಿದೆ’ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಗಿರಿಗೌಡ ಎಚ್., ಗೌರವಾಧ್ಯಕ್ಷ ಎಸ್.ಬಸವರಾಜು, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ, ಹಿರಿಯ ಉಪಾಧ್ಯಕ್ಷ ಆರ್.ಮೋಹನಕುಮಾರ್, ಉಪಾಧ್ಯಕ್ಷ ಸದಾನಂದ, ಸಂಘದ ಕಾರವಾರ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನಾಯ್ಕ, ಶಿರಸಿ ಜಿಲ್ಲಾ ಘಟಕದ ಅಧ್ಯಕ್ಷ ಕಿರಣಕುಮಾರ ನಾಯ್ಕ ಇದ್ದರು.
ಸರ್ಕಾರಿ ನೌಕರರಿಗೆ ಜಾರಿಗೆ ತರಲಾಗಿರುವ ಆರೋಗ್ಯ ಸಂಜೀವಿನಿ ಯೋಜನೆಯಡಿ ಮಹಿಳಾ ನೌಕರರು ತಂದೆ ತಾಯಿಯನ್ನು ಯೋಜನೆ ವ್ಯಾಪ್ತಿಗೆ ಸೇರಿಸಲು ಅವಕಾಶ ಮಾಡಿಕೊಡಲಾಗಿದೆಸಿ.ಎಸ್.ಷಡಕ್ಷರಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.