ADVERTISEMENT

ಉತ್ತರ ಕನ್ನಡ | ಪಕ್ಷಕ್ಕಾಗಿ ದುಡಿಯುವ ಪ್ರತಿಜ್ಞೆ

ನಗರ, ಗ್ರಾಮೀಣ ಪ್ರದೇಶದ ವಿವಿಧ ಸ್ಥಳಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವೀಕ್ಷಣೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 13:51 IST
Last Updated 2 ಜುಲೈ 2020, 13:51 IST
ಶಿರಸಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳು ಎಲ್‌ಇಡಿ ಪರದೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವೀಕ್ಷಿಸಿದರು
ಶಿರಸಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳು ಎಲ್‌ಇಡಿ ಪರದೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವೀಕ್ಷಿಸಿದರು   

ಶಿರಸಿ: ಡಿ.ಕೆ.ಶಿವಕುಮಾರ ಅವರು ಗುರುವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರೆ, ಅದೇ ವೇಳೆಗೆ ಇಲ್ಲಿನ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುವ ಪ್ರತಿಜ್ಞೆ ಮಾಡಿದರು.

ಕಾಂಗ್ರೆಸ್ ಜಿಲ್ಲಾ ಘಟಕ ಹಾಗೂ ಬ್ಲಾಕ್ ಘಟಕದ ವತಿಯಿಂದ ಇಲ್ಲಿನ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಎರಡು ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿತ್ತು. ಪಕ್ಷದ ಪ್ರಮುಖರು, ಪದಾಧಿಕಾರಿಗಳು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವನ್ನು ವೀಕ್ಷಿಸಿದರು. ಸೇವಾದಳದ ಗೌರವ ರಕ್ಷೆ, ವಂದೇ ಮಾತರಂ ಗೀತೆ ಪ್ರಸ್ತುತಿ, ಸಂವಿಧಾನ ಪೀಠಿಕೆ ಪಠಣದ ಜತೆಗೆ, ಸಾಮೂಹಿಕ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ನಗರದ 16 ಕಡೆಗಳಲ್ಲಿ ಕಾರ್ಯಕರ್ತರು, ಸಾರ್ವಜನಿಕರಿಗೆ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೆಲವು ಕಾರ್ಯಕರ್ತರು ಮೊಬೈಲ್‌ನಲ್ಲಿ ಝೂಮ್ ಆ್ಯಪ್ ಮೂಲಕ ಕಾರ್ಯಕ್ರಮ ವೀಕ್ಷಿಸಿದರು. ಕಾಂಗ್ರೆಸ್ ಪಕ್ಷದ ಪ್ರಮುಖರು, ಪದಾಧಿಕಾರಿಗಳ ಮನೆ ಜಗುಲಿಯಲ್ಲಿ ಪ್ರತಿಜ್ಞಾ ಕಾರ್ಯಕ್ರಮವನ್ನು ಟಿ.ವಿ.ಯಲ್ಲಿ ನೋಡಲು ವ್ಯವಸ್ಥೆಗೊಳಿಸಲಾಗಿತ್ತು.

ADVERTISEMENT

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ, ವೀಕ್ಷಕಿ ಸುಷ್ಮಾ ರೆಡ್ಡಿ, ಜಿಲ್ಲಾ ಉಸ್ತುವಾರಿ ವಿ.ಎಸ್.ಆರಾಧ್ಯ, ಬ್ಲಾಕ್ ಅಧ್ಯಕ್ಷ ಜಗದೀಶ ಗೌಡ, ಪ್ರಮುಖರಾದ ಆರ್.ಎಚ್.ನಾಯ್ಕ, ಸತೀಶ ನಾಯ್ಕ, ಮಾಧವ ರೇವಣಕರ, ತಾರಾ ನಾಯ್ಕ, ಪ್ರಸನ್ನ ಶೆಟ್ಟಿ, ಶ್ರೀನಿವಾಸ ನಾಯ್ಕ ಇದ್ದರು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭೀಮಣ್ಣ ನಾಯ್ಕ ಅವರು, ‘ಜಿಲ್ಲೆಯ ಎಲ್ಲ 14 ಬ್ಲಾಕ್‌ಗಳ ವ್ಯಾಪ್ತಿಯಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಸಿದ್ಧತೆ ಮಾಡಲಾಗಿತ್ತು. ಸುಮಾರು 336 ಸ್ಥಳಗಳಲ್ಲಿ ಸಾವಿರಾರು ಕಾರ್ಯಕರ್ತರು, ಕೆಪಿಸಿಸಿ ನೂತನ ಸಾರಥಿಗಳ ಪದಗ್ರಹಣ ವೀಕ್ಷಿಸಿದರು’ ಎಂದರು. ಕೊನೆಯಲ್ಲಿ ರಾಷ್ಟ್ರಗೀತೆಯ ಪ್ರಸ್ತುತಿ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.