ADVERTISEMENT

ಉತ್ತರ ಕನ್ನಡ| 'ಕಾಂಗ್ರೆಸ್‌ನಿಂದ ರೈತ ವಿರೋಧಿ ಆಡಳಿತ'

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ: ಬಿಜೆಪಿ ಆರೋಪ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2025, 3:16 IST
Last Updated 5 ಡಿಸೆಂಬರ್ 2025, 3:16 IST
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ನೇತೃತ್ವದಲ್ಲಿ ಕಾರವಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು 
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ನೇತೃತ್ವದಲ್ಲಿ ಕಾರವಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು    

ಕಾರವಾರ: ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾರವಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರೈತರು, ಮೀನುಗಾರರು, ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಆರೋಪಿಸಿ ಘೋಷಣೆ ಕೂಗಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ‘ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರದ ಕಿಸಾನ್ ಸನ್ಮಾನ ಯೋಜನೆ ಜೊತೆಗೆ ₹4 ಸಾವಿರ ಸೇರಿಸಿ, ₹10ಸಾವಿರವನ್ನು ರೈತರಿಗೆ ನೀಡಲಾಗಿತ್ತು. ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೆ ತರಲಾಗಿತ್ತು. ಆದರೆ, ಈ ಎಲ್ಲ ಯೋಜನೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸ್ಥಗಿತಗೊಳಿಸಿದೆ’ ಎಂದರು.

ADVERTISEMENT

‘ಅಡಿಕೆ ಬೆಳೆಗಾರರು, ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಎಲೆಚುಕ್ಕಿ ರೋಗದಿಂದ ತೋಟ ನಾಶವಾಗುತ್ತಿದೆ. ರಸ್ತೆಯ ತುಂಬ ಗುಂಡಿ ತುಂಬಿಕೊಂಡಿದೆ. ಸರ್ಕಾರ ಮಾತ್ರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ’ ಎಂದರು.

‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾದ ಅನುದಾನದಲ್ಲಿ ನಡೆಯುತ್ತಿರುವ ಯೋಜನೆಗಳನ್ನೇ ಈಗಿನ ಸರ್ಕಾರ ತನ್ನ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ, ‘ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ವಿಳಂಬ ಮಾಡಿದ ಸರ್ಕಾರ ರೈತರ ಸೌಲಭ್ಯಗಳನ್ನು ಕಸಿದಿದೆ. ರೈತರಿಗೆ ಅನುಕೂಲ ಮಾಡಿಕೊಡುವ ಯೋಜನೆ ತನ್ನಿಂದ ರೂಪಿಸಲಾಗದಿದ್ದರೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ನಡೆಸಿದೆ’ ಎಂದರು.

ರೈತರ ಪರ ಜಾರಿಗೆ ತಂದಿದ್ದ ಯೋಜನೆಗಳನ್ನು ರಾಜ್ಯ ಸರ್ಕಾರ ಮುಂದುವರಿಸಬೇಕು ಎಂದು ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ, ಅಂಕೋಲಾ ಪುರಸಭೆ ಅಧ್ಯಕ್ಷ ಸೂರಜ್ ನಾಯ್ಕ, ಬಿಜೆಪಿ ಪದಾಧಿಕಾರಿಗಳಾದ ಸಂಜಯ ಸಾಳುಂಕೆ, ಸುನೀಲ ಸೋನಿ, ರಾಘವೇಂದ್ರ ಭಟ್, ಜಗದೀಶ ನಾಯಕ ಮೊಗಟಾ, ಗಜಾನನ ಗುನಗಾ, ಸುಭಾಷ ಗುನಗಿ, ಸಂಜು ನಾಯ್ಕ ಇದ್ದರು.

ಆಸ್ಪತ್ರೆ ಸ್ಥಾಪನೆಗೆ ಅನಾದರ

‘ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಯತ್ನ ನಡೆಸಲಾಗಿತ್ತು. ಕುಮಟಾದಲ್ಲಿ ಸೂಕ್ತ ಜಾಗ ಮಂಜೂರು ಮಾಡಿದ್ದೆವು. ಆದರೆ ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಆ ಪಕ್ಷದಿಂದ ಜಿಲ್ಲೆಯಿಂದ ಹೆಚ್ಚಿನ ಶಾಸಕರಿದ್ದರೂ ಈವರೆಗೆ ಆಸ್ಪತ್ರೆ ಸ್ಥಾಪನೆಗೆ ಪ್ರಯತ್ನಿಸಿಲ್ಲ. ಕ್ರಿಮ್ಸ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯ ಕಲ್ಪಿಸಲು ನಾನು ಬಿಡುಗಡೆಗೊಳಿಸಿದ್ದ ಅನುದಾನವೂ ಬಳಕೆ ಆಗಿಲ್ಲ. ಅನುದಾನ ಇದ್ದರೂ ಪರಿಕರ ಖರೀದಿಗೂ ಮುಂದಾಗುತ್ತಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.