ADVERTISEMENT

ಅನರ್ಹ ಎಂದರೆ ಉಪಯೋಗಕ್ಕೆ ಬಾರದವರು, ನಿಷ್ಪ್ರಯೋಜಕರು ಎಂದರ್ಥ: ಭೀಮಣ್ಣ ನಾಯ್ಕ

ಮುಂಡಗೋಡಿಗೆ ಸಿದ್ದರಾಮಯ್ಯ 4ಕ್ಕೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 12:46 IST
Last Updated 1 ಡಿಸೆಂಬರ್ 2019, 12:46 IST
ಯಲ್ಲಾಪುರ ಕ್ಷೇತ್ರದ ಘೋಷಿತ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕ ಮಾತನಾಡಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಕೆ.ಭಾಗವತ್ ಚಿತ್ರದಲ್ಲಿದ್ದಾರೆ
ಯಲ್ಲಾಪುರ ಕ್ಷೇತ್ರದ ಘೋಷಿತ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕ ಮಾತನಾಡಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಕೆ.ಭಾಗವತ್ ಚಿತ್ರದಲ್ಲಿದ್ದಾರೆ   

ಮುಂಡಗೋಡ: ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ಕೆಲವು ಸ್ವಾರ್ಥಿಗಳು ಮಾತ್ರ ಪಕ್ಷ ಬಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಹೇಳಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಿವಂಗತ ಬಂಗಾರಪ್ಪನವರು ಬೇರೆ ಪಕ್ಷಕ್ಕೆ ಹೋದರೂ ಸಹ ಅವರ ಆಶೀರ್ವಾದ ಪಡೆದು, ಕಾಂಗ್ರೆಸ್‌ ಪಕ್ಷದಲ್ಲಿಯೇ ನಾನು ಉಳಿದುಕೊಂಡೆ. ತತ್ವ, ಸಿದ್ಧಾಂತಕ್ಕೆ ಬದ್ಧನಾಗಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಿರುವೆ. ಯಲ್ಲಾಪುರ ತಾಲ್ಲೂಕಿನಲ್ಲಿ ಕೆಲವರು ಕಾಂಗ್ರೆಸ್‌ ಘಟಕಗಳನ್ನು ವಿಸರ್ಜನೆ ಮಾಡಿರುವುದಾಗಿ ಹೇಳಿದ್ದಾರೆ. ಕಾಂಗ್ರೆಸ್‌ ಒಂದು ಸಮುದ್ರ ಇದ್ದಂತೆ. ಯಾರೂ ವಿಸರ್ಜನೆ ಮಾಡಲು ಸಾಧ್ಯವಿಲ್ಲ. ಪಕ್ಷಕ್ಕೆ ದೊಡ್ಡ ಸಮೂಹ ಇದೆ’ ಎಂದರು.

‘ಅನರ್ಹ’ ಎಂದರೆ ಯಾವತ್ತೂ ಉಪಯೋಗಕ್ಕೆ ಬಾರದವರು, ನಿಷ್ಪ್ರಯೋಜಕರು ಎಂದು ಗ್ರಾಮೀಣ ಭಾಷೆಯಲ್ಲಿ ಹೇಳುತ್ತಾರೆ. ನೆರೆಹಾವಳಿಯಿಂದ ಜನರು ತೊಂದರೆಯಲ್ಲಿದ್ದಾರೆ. ಇಂತಹ ಸಮಯದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಬೇಕಾದವರು ಸ್ವಾರ್ಥ, ಆಮಿಷಕ್ಕೆ ಬಲಿಯಾಗಿ ರಾಜೀನಾಮೆ ನೀಡಿದ್ದಾರೆ. ಕ್ಷೇತ್ರದ 245 ಬೂತ್‌ಗಳಲ್ಲಿ ಪಕ್ಷ ಸಂಘಟನೆ ಚುರುಕಾಗಿದೆ ಎಂದು ಹೇಳಿದರು.

ADVERTISEMENT

ಬೃಹತ್‌ ಸಮಾವೇಶ: ಇಲ್ಲಿನ ತಾಲ್ಲೂಕಾ ಕ್ರೀಡಾಂಗಣದಲ್ಲಿ ನ.4ರಂದು ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಮಾಜಿ ಸಚಿವರಾದ ಆರ್‌.ವಿ.ದೇಶಪಾಂಡೆ, ಎಚ್‌.ಕೆ.ಪಾಟೀಲ, ಜಿ.ಪರಮೇಶ್ವರ, ಸಿ.ಎಂ.ಇಬ್ರಾಹಿಂ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಎಸ್‌.ಆರ್‌.ಪಾಟೀಲ, ಜಿಲ್ಲೆಯ ಕಾಂಗ್ರೆಸ್‌ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಭೀಮಣ್ಣ ನಾಯ್ಕ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.