ADVERTISEMENT

ಬಿಜೆಪಿ ಭ್ರಷ್ಟಾಚಾರಕ್ಕೆ ಗುತ್ತಿಗೆದಾರ ಬಲಿ: ಕಾಂಗ್ರೆಸ್

ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 15:44 IST
Last Updated 16 ಏಪ್ರಿಲ್ 2022, 15:44 IST
ಶಾಸಕ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಶಿರಸಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಮಾತನಾಡಿದರು.
ಶಾಸಕ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಶಿರಸಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಮಾತನಾಡಿದರು.   

ಶಿರಸಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಕಾರಣರಾದ ಶಾಸಕ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇಲ್ಲಿನ ಹಳೆ ಬಸ್ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಕಾಲ್ನಡಿಗೆ ಮೂಲಕ ಮೆರವಣಿಗೆ ಸಾಗಿದ ಮುಖಂಡರು, ಕಾರ್ಯಕರ್ತರು ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಮಾತನಾಡಿ, ‘ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಇದ್ದಾಗ ಪ್ರಧಾನಿ ನರೇಂದ್ರ ಮೋದಿ ಇದು ಶೇ 10 ಕಮಿಷನ್ ಸರ್ಕಾರ ಎಂದು ಟೀಕಿಸಿದ್ದರು. ಈಗಿನ ರಾಜ್ಯ ಸರ್ಕಾರ ಶೇ 40ರಷ್ಟು ಕಮಿಷನ್ ಹೊಡೆಯುತ್ತಿದೆ ಎಂಬ ಬಹಿರಂಗ ಆರೋಪವಿದ್ದರೂ ಮೋದಿ ಮಾತನಾಡುತ್ತಿಲ್ಲ. ಸರ್ಕಾರ ಇನ್ನಷ್ಟು ಕಮೀಶನ್ ಹೊಡೆಯಲಿ ಎಂದು ಸುಮ್ಮನಿದ್ದಾರೆಯೇ?’ ಎಂದು ಪ್ರಶ್ನಿಸಿದರು.

ADVERTISEMENT

‘ಈಶ್ವರಪ್ಪ ಅವರ ಭ್ರಷ್ಟಾಚಾರವೇ ಗುತ್ತಿಗೆದಾರನನ್ನು ಬಲಿ ಪಡೆದಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥ ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು.

ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಮಾತನಾಡಿ, ‘ಶಾಸಕ ಕೆ.ಎಸ್.ಈಶ್ವರಪ್ಪ ಅವರನ್ನು ಸಾಮಾನ್ಯ ಆರೋಪಿಯಂತೆ ವಿಚಾರಣೆ ನಡೆಸಬೇಕು. ರಾಜ್ಯದಲ್ಲಿನ ಅಶಾಂತಿ, ಅಸ್ಥಿರ ವಾತಾವರನದಿಂದ ಹೂಡಿಕೆದಾರರು ರಾಜ್ಯಕ್ಕೆ ಕಾಲಿಡಲು ಹಿಂದೇಟು ಹಾಕುತ್ತಿದ್ದಾರೆ’ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ, ‘ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಜನಸಾಮಾನ್ಯರಿಗೆ ಕಷ್ಟವಾಗಲಿದೆ’ ಎಂದರು. ಪ್ರಮುಖ ಪ್ರಶಾಂತ ದೇಶಪಾಂಡೆ ಮಾತನಾಡಿ, ‘ಪ್ರಜಾಪ್ರಭುತ್ವ ವಿರೋಧಿ, ಭ್ರಷ್ಟಾಚಾರಿ ಸರ್ಕಾರ ಅಧಿಕಾರದಲ್ಲಿರುವ ಕಾರಣ ಜನರು ಹೈರಾಣಾಗಿದ್ದಾರೆ. ಬಿಜೆಪಿ ಕಾರ್ಯಕರ್ತರೆ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ’ ಎಂದು ಲೇವಡಿ ಮಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಷ್ಮಾ ರಾಜಗೋಪಾಲ್, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ಸುಜಾತಾ ಗಾಂವಕರ್, ಎಸ್.ಕೆ.ಭಾಗವತ, ಕೆ.ಶಂಭು ಶೆಟ್ಟಿ, ರವೀಂದ್ರ ನಾಯ್ಕ, ವೆಂಕಟೇಶ ಹೆಗಡೆ ಹೊಸಬಾಳೆ, ಜ್ಯೋತಿ ಪಾಟೀಲ, ಅಬ್ಬಾಸ್ ತೊನ್ಸೆ, ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.