ADVERTISEMENT

‘ಗ್ರಾಮಗಳಲ್ಲಿ ಕೋವಿಡ್ ಹರಡದಂತೆ ಎಚ್ಚರಿಕೆ ವಹಿಸಿ’

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 16:12 IST
Last Updated 28 ಏಪ್ರಿಲ್ 2021, 16:12 IST
ಕಾರವಾರದಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿದರು
ಕಾರವಾರದಲ್ಲಿ ಬುಧವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಾತನಾಡಿದರು   

ಕಾರವಾರ: ‘ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಹರಡದಂತೆ ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಾಗಿ, ಜಾಗೃತರಾಗಿ ಕಾರ್ಯ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳ ಜೊತೆಗೆ ವಿಡಿಯೊ ಸಂವಾದ ನಡೆಸಿ ಮಾತನಾಡಿದರು.

‘ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ ಗ್ರಾಮಗಳಿಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಮರಳುತ್ತಿದ್ದಾರೆ. ಹೀಗೆ ಬಂದವರ ಅಂಕಿ ಸಂಖ್ಯೆಗಳ ಮಾಹಿತಿಯನ್ನು ದಾಖಲಿಸಿಕೊಂಡು ಅವರ ಬಗ್ಗೆ ನಿಗಾವಹಿಸಬೇಕು. ಬಂದವರಿಗೆ ಉಳಿದುಕೊಳ್ಳಲು ಸಮಸ್ಯೆ ಆಗಿರುವುದು ಕಂಡುಬಂದರೆ ಸ್ಪಂದಿಸಿ, ಕೋವಿಡ್ ತಪಾಸಣೆಗೆ ಒಳಪಡಿಸಬೇಕು. ಒಂದೊಮ್ಮೆ ರೋಗ ಲಕ್ಷಣಗಳು ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ADVERTISEMENT

‘ಪ್ರತಿ ಗ್ರಾಮದಲ್ಲೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಆರೋಗ್ಯಾಧಿಕಾರಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಹೊರಗಡೆಯಿಂದ ಬಂದವರುಕ್ವಾರಂಟೈನ್ ಆಗುವಂತೆ, ಯಾರೂ ಹೊರಗಡೆ ಓಡಾಡದಂತೆ ಮತ್ತು ಕೊರೊನಾ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾದ ಕೋವಿಡ್ ಟಾಸ್ಕ್‌ಫೋರ್ಸ್ ಸಮಿತಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಪ್ರಿಯಾಂಗಾ, ಜಿಲ್ಲಾ ಪೊಲೀಸ್‍ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ಆರೋಗ್ಯಾಧಿಕಾರಿ ಡಾ.ಶರದ್ ನಾಯಕ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಲತಾ, ತಹಶೀಲ್ದಾರ್ ಆರ್.ವಿ.ಕಟ್ಟಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಸೂರಜಾ ನಾಯಕ, ನಗರಸಭೆ ಆಯುಕ್ತ ಆರ್.ಪಿ.ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.