ADVERTISEMENT

ಅನಾಥ ಮಹಿಳೆಯರನ್ನು ಸ್ವಾಧಾರ ಗೃಹಕ್ಕೆ ದಾಖಲಿಸಿ

ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 16:09 IST
Last Updated 23 ಸೆಪ್ಟೆಂಬರ್ 2022, 16:09 IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಜಿ.ಪಂ ಸಿ.ಇ.ಒ ಪ್ರಿಯಾಂಗಾ.ಎಂ ಇದ್ದಾರೆ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಜಿ.ಪಂ ಸಿ.ಇ.ಒ ಪ್ರಿಯಾಂಗಾ.ಎಂ ಇದ್ದಾರೆ   

ಕಾರವಾರ: ‘ಸಮಾಜದಲ್ಲಿ ಯಾವುದೇ ಆಧಾರವಿಲ್ಲದ, ನಿರ್ಗತಿಕ ಮಹಿಳೆಯರನ್ನು ಕೂಡಲೇ ಸ್ವಾಧಾರ ಗೃಹಕ್ಕೆ ದಾಖಲಿಸಬೇಕು’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಸ್ವಾಧಾರ ಕೇಂದ್ರಕ್ಕೆ ಬರುವ ನೊಂದ ಮಹಿಳೆಗೆ ಅಲ್ಲಿ ಸಿಗುವ ಸೌಲಭ್ಯಗಳನ್ನು ತಿಳಿಸಬೇಕು. ಕೌಟುಂಬಿಕ ಸಮಸ್ಯೆಗಳಿಂದ ಪ್ರಕರಣ ದಾಖಲಾಗಿರುವ ಮಹಿಳೆಯರಿಗೆ ಖಾಸಗಿಯಾಗಿ ವಕೀಲರನ್ನು ನೇಮಿಸಿಕೊಳ್ಳಲು ಆಗದಿರಬಹುದು. ಅವರಿಗೆ ಕಾನೂನು ಸೇವಾ ಪ್ರಾಧಿಕಾರದ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು’ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ADVERTISEMENT

‘ಶಿಶು ಅಭಿವೃದ್ಧಿ ಅಧಿಕಾರಿಗಳು ಕಾಯಂ ವೇಳಾಪಟ್ಟಿ ನಿಗದಿ ಪಡಿಸಿ, ಆಯಾ ತಾಲ್ಲೂಕುಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಬೇಕು. ನೊಂಣದ ಮಹಿಳೆಯರೊಂದಿಗೆ ಸಮಾಲೋಚನೆ ನಡೆಸಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಮನೆಗಳು ಅಂಗನವಾಡಿ ಕೇಂದ್ರಗಳಿಂದ ದೂರ ಇವೆ. ಅಲ್ಲದೇ ಗುಡ್ಡಗಾಡು ಪ್ರದೇಶವಾಗಿರುವ ಕಾರಣ ಮಾತೃಪೂರ್ಣ ಯೋಜನೆಯ ಪ್ರಕಾರ ಅಂಗನವಾಡಿ ಕೇಂದ್ರದಲ್ಲೇ ಆಹಾರ ಸ್ವೀಕರಿಸಲು ಫಲಾನುಭವಿಗಳು ಆಸಕ್ತಿ ತೋರುತ್ತಿಲ್ಲ. ಸರ್ಕಾರದ ಆದೇಶದಂತೆ ಫಲಾನುಭವಿಗಳ ಮನೆಗೆ ಆಹಾರವನ್ನು ತಲುಪಿಸುವಂತೆ ಆಗಬೇಕು’ ಎಂದರು.

‘ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿಯಲ್ಲಿ ಗರ್ಭಿಣಿ, ಬಾಣಂತಿಯರಿಗೆ ತಲಾ ₹ 5 ಸಾವಿರದಂತೆ ಮೂರು ಕಂತುಗಳಲ್ಲಿ ಹಣ ವರ್ಗಾವಣೆ ಮಾಡಲಾಗುತ್ತಿದೆ. ಇದಕ್ಕೆ ಮೂರು ಹಂತಗಳಲ್ಲಿ ಅರ್ಜಿ ಸಲ್ಲಿಸುವುದಕ್ಕಿಂತ ಒಂದೆ ಸಲ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ದುರಸ್ಥಿಯಲ್ಲಿರುವ ಅಂಗನವಾಡಿ ಕೇಂದ್ರಗಳು, ಸ್ಥಳ ಹಾಗೂ ಬೇಕಾಗುವ ವಸ್ತುಗಳ ಪಟ್ಟಿ ಮಾಡಿ ನೀಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರಿಯಾಂಗಾ.ಎಂ, ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿ ರೇಣುಕಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ಯಾಮಲಾ ಸಿ.ಕೆ, ಆರೋಗ್ಯಾಧಿಕಾರಿ ಡಾ. ಶರದ್ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.