ಕಾರವಾರ: ‘ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆಯ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ, ಸಾಧ್ಯವಾದಷ್ಟು ಬೇಗನೆ ಪೌರ ಕಾರ್ಮಿಕರಿಗೆ ಮನೆಗಳನ್ನು ಹಸ್ತಾಂತರಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.
‘ವಸತಿ ಸಮುಚ್ಛಯ ನಿರ್ಮಾಣಕ್ಕೆ ಜಾಗದ ಸಮಸ್ಯೆ ಎದುರಾಗಿದ್ದರೆ ತಕ್ಷಣವೇ ಸಂಬಂಧಪಟ್ಟ ತಹಶೀಲ್ದಾರ್ ಅವರನ್ನು ಸಂಪರ್ಕಿಸಿ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. ಅನಗತ್ಯ ಕಾರಣ ನೀಡಿ ಯೋಜನೆ ವಿಳಂಬ ಮಾಡಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಈಚೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆಯಲ್ಲಿ ಎಚ್ಚರಿಸಿದರು.
‘ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಲ ಹೊರುವ ಪದ್ಧತಿ ಪಾಲನೆಯಾಗದಂತೆ ಎಚ್ಚರವಹಿಸಬೇಕು. ಪೌರ ಕಾರ್ಮಿಕರಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಬೇಕು. ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲಾ ಸುರಕ್ಷತಾ ಪರಿಕರಗಳನ್ನು ನೀಡುವುದರ ಜೊತೆಗೆ ಅವುಗಳನ್ನು ಬಳಸಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು’ ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ಜಗದೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ವೈ.ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.