ADVERTISEMENT

ಲೋಪವಾದರೆ ಅಧಿಕಾರಿಯೇ ಹೊಣೆ: ಪ್ರಭುಲಿಂಗ ಕವಳಿಕಟ್ಟಿ

ಚುನಾವಣೆ ತರಬೇತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 15:39 IST
Last Updated 14 ಮಾರ್ಚ್ 2023, 15:39 IST
ಚುನಾವಣಾ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಇದ್ದರು.
ಚುನಾವಣಾ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಇದ್ದರು.   

ಕಾರವಾರ: ‘ಚುನಾವಣಾ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಯಾವುದೇ ಗೊಂದಲವಿಲ್ಲದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಲೋಪದೋಷಗಳಾದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿ ನೇರ ಹೊಣೆಗಾರರಾಗುತ್ತಾರೆ’ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಎಚ್ಚರಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಚುನಾವಣೆ ಅಧಿಕಾರಿಗಳಿಗೆ ಹಾಗೂ ಸಹಾಯಕ ಚುನಾವಣೆ ಅಧಿಕಾರಿಗಳಿಗೆ ಮಾದರಿ ನೀತಿ ಸಂಹಿತೆ ಮತ್ತು ಕಾನೂನು ಸುವ್ಯವಸ್ಥೆಯ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ವಲಯ ಅಧಿಕಾರಿಗಳು ಮತಗಟ್ಟೆ ಬಗ್ಗೆ ಮಾಹಿತಿ ಇಟ್ಟುಕೊಳ್ಳಬೇಕು. ಮತದಾನ ಸಂದರ್ಭದಲ್ಲಿ ಜನಸಂದಣಿಯನ್ನು ತಡೆಗಟ್ಟಲು ಯೋಜನೆಯನ್ನು ರೂಪಿಸಬೇಕು. ಬೇಸಿಗೆ ಕಾಲವಾಗಿರುವುದರಿಂದ ಮತಗಟ್ಟೆಗಳಲ್ಲಿ ನೆರಳಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು’ ಎಂದರು.‌

ADVERTISEMENT

‘ಜಿಲ್ಲೆಯಲ್ಲಿ ಮಾದಕ ವಸ್ತುಗಳ ತಡೆಗೆ ಚೆಕ್‍ಪೋಸ್ಟ್ ಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಬೇಕು. ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ನೌಕಾದಳ, ತಟರಕ್ಷಕ ಪಡೆಗಳ ನೆರವನ್ನೂ ಪಡೆದುಕೊಳ್ಳಬೇಕು’ ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಚುನಾವಣಾ ಅಧಿಕಾರಿ, ಸಹಾಯಕ ಚುನಾವಣಾ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಾದ ಕ್ರಮಗಳ ಕುರಿತು ವಿವರಿಸಿದರು. ರಾಜಕೀಯ ಪಕ್ಷದ ನಾಯಕರ ನಾಮಪತ್ರ ಸಲ್ಲಿಕೆ ವೇಳೆ ಮತ್ತು ಮಾದರಿ ನೀತಿ ಸಂಹಿತೆಯಲ್ಲಿ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ವಿವರಿಸಿದರು.

ಉಪ ವಿಭಾಗಾಧಿಕಾರಿಗಳಾದ ಜಯಲಕ್ಷ್ಮಿ ರಾಯಕೋಡ್, ರಾಘವೇಂದ್ರ ಜಗಲಾಸರ್, ಆರ್.ದೇವರಾಜ, ಯೋಜನಾ ಅಧಿಕಾರಿಗಳು ಸ್ಟೇಲ್ಲಾ ವರ್ಗಿಸ್, ಸಮಾಜ ಕಲ್ಯಾಣ ಉಪ ನಿರ್ದೇಶಕ ಅಜ್ಜಪ್ಪ ಸೊಗಲದ, ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.