ADVERTISEMENT

ಹೊನ್ನಾವರ ಬಳಿ ಖಾಸಗಿ ಬಂದರು ಯೋಜನೆ ಕೈಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 16:25 IST
Last Updated 15 ಏಪ್ರಿಲ್ 2025, 16:25 IST
ಹೊನ್ನಾವರ ತಾಲ್ಲೂಕು ಕಾಸರಕೋಡ ಟೊಂಕದ ಬಳಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಖಾಸಗಿ ವಾಣಿಜ್ಯ ಬಂದರು ಯೋಜನೆಯನ್ನು ಕೈಬಿಡಬೇಕು ಎಂದು ರಾಷ್ಟ್ರೀಯ ಮೀನುಗಾರರ ಸಂಘಟನೆ ಮುಖಂಡರು ಸಿದ್ದರಾಮಯ್ಯ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. 
ಹೊನ್ನಾವರ ತಾಲ್ಲೂಕು ಕಾಸರಕೋಡ ಟೊಂಕದ ಬಳಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಖಾಸಗಿ ವಾಣಿಜ್ಯ ಬಂದರು ಯೋಜನೆಯನ್ನು ಕೈಬಿಡಬೇಕು ಎಂದು ರಾಷ್ಟ್ರೀಯ ಮೀನುಗಾರರ ಸಂಘಟನೆ ಮುಖಂಡರು ಸಿದ್ದರಾಮಯ್ಯ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.    

ಬೆಂಗಳೂರು: ಹೊನ್ನಾವರ ತಾಲ್ಲೂಕು ಕಾಸರಕೋಡ ಟೊಂಕದ ಬಳಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಖಾಸಗಿ ವಾಣಿಜ್ಯ ಬಂದರು ಯೋಜನೆಯನ್ನು ಕೈಬಿಡಲು ರಾಷ್ಟ್ರೀಯ ಮೀನುಗಾರರ ಸಂಘಟನೆ ಒತ್ತಾಯಿಸಿದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಸಂಘಟನೆಯ ಪ್ರಮುಖರು, ಸ್ಥಳೀಯ ಪರಿಸರ ಹಾಗೂ ಮೀನುಗಾರಿಕೆಗೆ ಮಾರಕವಾಗಿರುವ ಯೋಜನೆ ಅನುಷ್ಠಾನಗೊಂಡರೆ ಸಾವಿರಾರು ಮೀನುಗಾರರು ತಮ್ಮ ನೆಲೆ ಕಳೆದುಕೊಳ್ಳುತ್ತಾರೆ. ಪರಿಸರ ಸೂಕ್ಷ್ಮ ಕಡಲತೀರಕ್ಕೆ ಧಕ್ಕೆಯಾಗುತ್ತದೆ. ಐದು ಕಿ.ಮೀ ಉದ್ದದ ಮೀನುಗಾರರ ವಸತಿ ನೆಲೆಯಲ್ಲಿ ಚತುಷ್ಪದ ರಸ್ತೆ ಹಾಗೂ ರೈಲು ಮಾರ್ಗ ನಿರ್ಮಾಣ ಯೋಜನೆಯನ್ನೂ ಕೈಬಿಡಬೇಕು. ಸಾರ್ವಜನಿಕ ಹಿತಾಸಕ್ತಿ ಒಳಗೊಂಡ ಈ ವಿಷಯದಲ್ಲಿ ಮುಖ್ಯಮಂತ್ರಿ ಮಧ್ಯ ಪ್ರವೇಶಿಸಬೇಕು ಎಂದು ಕೋರಿದರು.

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಧಾರಣಾ ಶಕ್ತಿಯನ್ನು ಮೀರಿ ಪರಿಸರ, ಜೀವವೈವಿಧ್ಯ ಮತ್ತು ಮೀನುಗಾರಿಕೆಗೆ ಆತಂಕವಾಗುವಂತೆ ಅಗತ್ಯಕ್ಕಿಂತ ಹೆಚ್ಚು ವಾಣಿಜ್ಯ ಬಂದರುಗಳನ್ನು ನಿರ್ಮಿಸಲಾಗುತ್ತಿದೆ. ಇಂತಹ ಅವೈಜ್ಞಾನಿಕ ನೀತಿಯಿಂದಾಗಿ ಮೀನುಗಾರರಲ್ಲಿ ಆತಂಕ ಮನೆಮಾಡಿದೆ. ಚುನಾವಣಾ ಸಮಯದಲ್ಲಿ ಕಡಲತೀರಕ್ಕೆ ಭೇಟಿ ನೀಡಿದ್ದ, ಈಗಿನ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಮಂಕಾಳ ವೈದ್ಯ ಅವರು ಮೀನುಗಾರರ ಹಿತಾಸಕ್ತಿ ರಕ್ಷಣೆ ಮಾಡುವ ಭರವಸೆ ನೀಡಿದ್ದರು. ಯೋಜನೆ ಜಾರಿಗೆ ಈಗ ಸಿದ್ಧತೆ ನಡೆದಿದೆ. ಹೋರಾಟಗಾರರ ಮೇಲೆ ಪೊಲೀಸ್‌ ದೌರ್ಜನ್ಯ ನಡೆಸಲಾಗುತ್ತಿದೆ. ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಕೊಚರೇಕರ ದೂರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.