ADVERTISEMENT

ಶಿರಸಿ: ವಿಧಾನಸೌಧ ಚಲೋ ಹೋರಾಟಕ್ಕೆ ಬೆಂಬಲ

ರೈತ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 15:48 IST
Last Updated 5 ಸೆಪ್ಟೆಂಬರ್ 2022, 15:48 IST
ರಾಘವೇಂದ್ರ ನಾಯ್ಕ ಕಿರವತ್ತಿ
ರಾಘವೇಂದ್ರ ನಾಯ್ಕ ಕಿರವತ್ತಿ   

ಶಿರಸಿ: ‘ರೈತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸೆ.12 ರಂದು ಬೆಂಗಳೂರಿನಲ್ಲಿ ನಡೆಯುವ ವಿಧಾನಸೌಧ ಚಲೋ ಹೋರಾಟದಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳಲಿದ್ದಾರೆ’ ಎಂದು ರೈತ ಸಂಘ ಹಸಿರು ಸೇನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕಿರವತ್ತಿ ಹೇಳಿದರು.

‘ರಾಜ್ಯ ಸರ್ಕಾರದಿಂದ ರೈತರಿಗೆ ನಿರಂತರ ಅನ್ಯಾಯ ಆಗುತ್ತಿದೆ. ಸಕಾಲದಲ್ಲಿ ರಸಗೊಬ್ಬರ ಪೂರೈಸಿಲ್ಲ. ಯೂರಿಯಾ ಗೊಬ್ಬರವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕಳಪೆ ಬಿತ್ತನೆ ಬೀಜ ಪೂರೈಕೆ ಮುಂದುವರೆದಿದೆ’ ಎಂದು ಇಲ್ಲಿ ಸೋಮವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಿ, ಕೃಷಿ ಪಂಪ್‍ಸೆಟ್‍ಗಳಿಗೆ ಮೀಟರ್ ಅಳವಡಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ. ಸರ್ಕಾರದ ಈ ನಡೆಯನ್ನು ಪ್ರಬಲ ಹೋರಾಟದ ಮೂಲಕ ಖಂಡಿಸಲಿದ್ದೇವೆ’ ಎಂದರು.

ADVERTISEMENT

‘ವಿವಾದಿತ ಕೃಷಿ ಕಾಯ್ದೆಯನ್ನು ಕೇಂದ್ರ ಹಿಂಪಡೆದಿದ್ದರೂ ರಾಜ್ಯ ವಾಪಸ್ ಪಡೆದಿಲ್ಲ. ಕಳೆದ ಬೆಳಗಾವಿ ಅಧಿವೇಶನದ ವೇಳೆ ಸರ್ಕಾರ ನೀಡಿದ್ದ ಭರವಸೆ ಈಡೇರಿಸಿಲ್ಲ’ ಎಂದು ದೂರಿದರು.

‘ಪ್ರಾಕೃತಿಕ ವಿಕೋಪದಿಂದ ಉಂಟಾದ ಹಾನಿಗೆ ತಕ್ಷಣ ಪರಿಹಾರ ನೀಡಬೇಕು. ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಕೇಂದ್ರಕ್ಕೆ ಸೀಮಿತರಾಗಿದ್ದಾರೆ. ಜನರ ಸಮಸ್ಯೆ ಆಲಿಸಲು ತಾಲ್ಲೂಕು ಮಟ್ಟದಲ್ಲೂ ಅವರು ಸಭೆ ನಡೆಸಬೇಕು. ಇದೇ ಮನಸ್ಥಿತಿ ಮುಂದುವರೆಸಿದರೆ ಸಚಿವರು ಪಾಲ್ಗೊಳ್ಳುವ ಎಲ್ಲ ಕಾರ್ಯಕ್ರಮದಲ್ಲಿ ಪ್ರತಿಭಟಿಸಲಿದ್ದೇವೆ’ ಎಂದು ಎಚ್ಚರಿಸಿದರು.

ನಾಗರಾಜ ಡಾಂಘೆ, ದೀಪಕ ಶೇಟ್, ರಾಜು ನಾಯ್ಕ, ಜಾಕೀರ ದಾಸನಕೊಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.