ಕಾರವಾರ: ಬಾಣಂತಿ ಗೀತಾ ಬಾನಾವಳಿ ಸಾವಿನ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಎಂಟು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನು ಮೀನುಗಾರರು ಸೋಮವಾರ ಅಂತ್ಯಗೊಳಿಸಿದರು. ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿದ ಉತ್ತರ ಕನ್ನಡ ಜಿಲ್ಲಾ ಮೀನು ಮಾರಾಟ ಒಕ್ಕೂಟದ ಅಧ್ಯಕ್ಷ ರಾಜು ತಾಂಡೇಲ, ‘ಗೀತಾ ಸಾವಿನ ಸಂಬಂಧ ಜಿಲ್ಲಾಡಳಿತಕ್ಕೆ ಈ ಹಿಂದೆ ಸಲ್ಲಿಕೆಯಾದ ವರದಿಯ ಬಗ್ಗೆ ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. 15 ದಿನಗಳಲ್ಲಿ ಅದರ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಸರ್ಕಾರಕ್ಕೆ ತಿಳಿಸುವುದಾಗಿ ಭರವಸೆ ನೀಡಿದ್ದಾರೆ. ಹಾಗಾಗಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದೇವೆ’ ಎಂದು ಹೇಳಿದರು.
ಕಾರವಾರದ ಸರ್ವೋದಯ ನಗರದ ಮೀನುಗಾರರ ಕುಟುಂಬದ ಗೀತಾ, ಜಿಲ್ಲಾ ಆಸ್ಪತ್ರೆಯಲ್ಲಿ 2020ರ ಸೆ.3ರಂದು ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ಮೃತಪಟ್ಟಿದ್ದರು. ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಭಾರಿ ಪ್ರತಿಭಟನೆಗಳೂ ನಡೆದಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.