ಶಿರಸಿ: ‘ಬಡವರು, ಜನಸಾಮಾನ್ಯರಿಗೆ ಅನುಕೂಲವಾಗುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಜಾರಿಗೊಳಿಸಿದೆ. ಇದು ಆರ್ಥಿಕವಾಗಿ ದುರ್ಬಲರಾದವರಿಗೆ ಆಹಾರ ಭದ್ರತೆ ಒದಗಿಸುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ನಗರದ ರಾಯಪ್ಪ ಹುಲೇಕಲ್ ಶಾಲೆಯ ಮುಂಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನ್‍ನನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ರಾಜ್ಯದ ಎಲ್ಲಾ ನಗರಗಳಲ್ಲೂ ಇಂದಿರಾ ಕ್ಯಾಂಟೀನ್‍ಗಳನ್ನು ತೆಗೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿ ವಾರ್ಡ್ ಗಳಲ್ಲಿಯೂ ಕ್ಯಾಂಟೀನ್ ತೆರೆಯುವ ಉದ್ದೇಶ ನಮ್ಮದಾಗಿದೆ’ ಎಂದರು. ‘ಶಾಸಕ ಭೀಮಣ್ಣ ನಾಯ್ಕ ಅವರು ಕ್ಷೇತ್ರದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದ್ದಾರೆ. ₹3 ಕೋಟಿ ವೆಚ್ಚದಲ್ಲಿ ಭೂಗತ ವಿದ್ಯುತ್ ಲೈನ್ ಕಾಮಗಾರಿಗೆ ಅನುಮೋದನೆ ದೊರಕಿದೆ’ ಎಂದು ಹೇಳಿದರು.
ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ‘ಇಂದಿರಾ ಕ್ಯಾಂಟೀನ್‍ನನ್ನು ಶಿರಸಿಯಲ್ಲಿ ಉದ್ಘಾಟಿಸಲಾಗಿದೆ. ಅನೇಕ ಭಾಗ್ಯಗಳನ್ನು ನೀಡುವ ಮೂಲಕ ಜತೆಗೆ ಬಡವರಿಗೆ ಅನುಕೂಲವಾಗುವಂತೆ ಕಡಿಮೆ ದರದಲ್ಲಿ ಆಹಾರವನ್ನು ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಲ್ಲಿ ರಾಜಕೀಯ ತರಬಾರದು. ಶಿರಸಿಯಲ್ಲಿ ಹಲವು ವರ್ಷಗಳಿಂದ ಇಂದಿರಾ ಕ್ಯಾಂಟೀನ್ ಆರಂಭ ಆಗಿರಲಿಲ್ಲ. ಪಕ್ಕದಲ್ಲೇ ಸರ್ಕಾರಿ ಆಸ್ಪತ್ರೆ ಸಹ ಇರುವುದರಿಂದ ಜನಸಾಮಾನ್ಯರಿಗೆ ಈ ಇಂದಿರಾ ಕ್ಯಾಂಟೀನ್ ಬಹು ಉಪಕಾರಿಯಾಗಲಿದೆ. ₹1.50 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ’ ಎಂದರು.
ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಮಾತನಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇದ್ದರು.
ಶಿರಸಿ ಸಿದ್ದಾಪುರ ಕ್ಷೇತ್ರಕ್ಕೆ ₹50 ಕೋಟಿ ಹಣ ಬಿಡುಗಡೆ ಆಗಿದೆ. ನಗರ ಹಾಗೂ ಗ್ರಾಮೀಣ ಭಾಗವನ್ನು ಸಮಾನವಾಗಿ ಅಭಿವೃದ್ಧಿ ಮಾಡುತ್ತೇವೆಭೀಮಣ್ಣ ನಾಯ್ಕ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.