
ಗೋಕರ್ಣ: ‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಅಗತ್ಯ ಅನುದಾನ ನೀಡಿ ಈಗ ಹೊಸ ಕಟ್ಟಡವನ್ನು ಲೋಕಾರ್ಪಣೆ ಮಾಡಿದ್ದೇವೆ. ಗ್ರಾಮಸ್ಥರ ಬೇಡಿಕೆಗೆ ತಕ್ಕಂತೆ ಕಾರ್ಯನಿರ್ವಹಿಸಲು ಬದ್ಧರಾಗಿದ್ದೇವೆ. ಗ್ರಾಮದ ಜನರ ಸಮಸ್ಯೆಗೆ ಗ್ರಾಮದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರವು ಹಲವು ಸೇವೆೆಗಳನ್ನು ಗ್ರಾಮ ಪಂಚಾಯಿತಿ ಮೂಲಕ ನೀಡುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.
ಸಮೀಪದ ಹಿರೇಗುತ್ತಿಯ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಮಾತನಾಡಿ, ‘ಪರಿಹಾರ ಕೇಳಿ ಪಂಚಾಯಿತಿಗೆ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ತಾಳ್ಮೆಯಿಂದ ಆಲಿಸಿ, ಸ್ಪಂದಿಸಿ, ಅವುಗಳನ್ನು ಬಗೆಹರಿಸಿಕೊಡಬೇಕು’ ಎಂದರು.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡಿ, ‘ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಜನರ ಬೇಡಿಕೆಗಳಿಗೆ ತಕ್ಕಂತೆ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಲಾಗಿದೆ. ಈ ಭಾಗದ ಕಾಲೇಜಿನ ಕಟ್ಟಡಕ್ಕೂ ಅನುದಾನ ಒದಗಿಸಲಾಗಿದೆ. ಪಂಚಾಯಿತಿ ಕಟ್ಟಡಕ್ಕೆ ಇನ್ನೂ ಹೆಚ್ಚುವರಿ ಅನುದಾನ ನೀಡಲಾಗುವುದು’ ಎಂದು ಭರವಸೆ ನೀಡಿದರು.
ಗ್ರಾಮ ಪಂಚಾಯತಿ ಅಧ್ಯಕ ಶಾಂತ ನಾರಾಯಣ ನಾಯ್ಕ, ಉಪಾಧ್ಯಕ್ಷೆ ವೆಂಕಮ್ಮ ಹರಿಕಂತ್ರ, ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಜೇಂದ್ರ ಭಟ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.