
ಕಾರವಾರ: ‘ಮೀನುಗಾರಿಕೆ ಉದ್ಯೋಗವು ಅನೇಕರಿಗೆ ಬದುಕು ನೀಡಿದೆಯಾದರೂ, ಇಂದು ಮೀನುಗಾರರು ಅತಂತ್ರ ಸ್ಥಿತಿಗೆ ತಲುಪುತ್ತಿದ್ದಾರೆ. ಇದನ್ನು ತಪ್ಪಿಸಿ ಶಕ್ತಿಯುತ ಸಮಾಜ ನಿರ್ಮಿಸಲು ಶಿಕ್ಷಣವಂತರ ಸಂಖ್ಯೆ ಹೆಚ್ಚಾಗುವುದು ಅನಿವಾರ್ಯ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಭಿಪ್ರಾಯಪಟ್ಟರು.
ಮುರ್ಡೇಶ್ವರದ ಆರ್.ಎನ್.ಎಸ್. ಸಭಾಭವನದಲ್ಲಿ ಜರುಗಿದ ಉತ್ತರ ಕನ್ನಡ ಜಿಲ್ಲಾ ಹರಿಕಂತ್ರ ಮಹಾಜನ ಸಂಘದ 20ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಮೀನುಗಾರ ಸಮುದಾಯವು ಶಿಕ್ಷಣದ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ’ ಎಂದರು.
ಕುಮಟಾ ಶಾಸಕ ದಿನಕರ ಶೆಟ್ಟಿ ಮಾತನಾಡಿ, ‘ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು’ ಎಂದು ಕರೆ ನೀಡಿದರು. ಸಂಘದ ಗೌರವಾಧ್ಯಕ್ಷ ಗಣಪತಿ ಮಾಂಗ್ರೆ ಹಾಗೂ ಉದ್ಯಮಿ ಗಜಾನನ ಹಿಣಿ ಮಾತನಾಡಿ,‘ಸಮುದಾಯವು ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಏಳಿಗೆ ಸಾಧಿಸಬೇಕು’ ಎಂದರು.
ಸಂಘದ ಅಧ್ಯಕ್ಷ ಗಣಪತಿ ಉಳ್ವೇಕರ್ ಅಧ್ಯಕ್ಷತೆ ವಹಿಸಿ, ‘ಸಮಾಜದ ಶೈಕ್ಷಣಿಕ ಸಬಲೀಕರಣಕ್ಕಾಗಿ ಕಳೆದ ಎರಡು ದಶಕಗಳಿಂದ ಈ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಹಂತದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮತ್ತು ಸಮಾಜದ 11 ಸಾಧಕರನ್ನು ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿ ಟಿ.ಬಿ.ಹರಿಕಾಂತ ಸ್ವಾಗತಿಸಿದರು. ಶಿವಾನಂದ ತಾಂಡೇಲ್ ನಿರ್ವಹಿಸಿದರು. ಶ್ರೀಕಾಂತ ದುರ್ಗೇಕರ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.