ಕಾರವಾರ: ‘ವಸತಿ ಯೋಜನೆಯಡಿ ಮನೆಗಳ ಮಂಜೂರಾತಿಗೆ ಲಂಚ ನೀಡಬೇಕಾಗುತ್ತಿದೆ ಎಂದು ಸ್ವತಃ ಆಡಳಿತ ಪಕ್ಷದ ಶಾಸಕರೇ ಆರೋಪಿಸಿದ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕಿದ್ದು, ವಸತಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ಸೂಕ್ತ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬರೆದ ಪತ್ರವನ್ನು ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಗೆ ಸಲ್ಲಿಸಲಾಯಿತು.
‘ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಎರಡು ವರ್ಷದಿಂದ ಜನಪರ ಆಡಳಿತ ನೀಡಲು ವಿಫಲವಾಗಿದೆ. ಅರಾಜಕತೆ, ಭ್ರಷ್ಟಾಚಾರ ಹೆಚ್ಚುತ್ತಿದ್ದು ಕೂಡಲೇ ಸರ್ಕಾರ ವಜಾಗೊಳಿಸಬೇಕು’ ಎಂದೂ ಜೆಡಿಎಸ್ ಪದಾಧಿಕಾರಿಗಳು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
‘ರಸ್ತೆ ಸಂಪರ್ಕ, ಕುಡಿಯುವ ನೀರು ಪೂರೈಕೆ, ಆರೋಗ್ಯ ಸೌಕರ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಸಾಧ್ಯವಾಗದೆ ಸರ್ಕಾರ ಪೇಚಿಗೆ ಸಿಲುಕಿದೆ. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡುತ್ತಿಲ್ಲ. ಪರಿಶಿಷ್ಟರಿಗೆ ಮೀಸಲಿಟ್ಟ ಹಣವನ್ನೂ ದುರ್ಬಳಕೆ ಮಾಡಿಕೊಳ್ಳಲಾಗಿದೆ. ರೈತರಿಗೆ, ಕಾರ್ಮಿಕರಿಗೆ ಈ ಹಿಂದೆ ಯೋಜನೆಗಳ ಸೌಲಭ್ಯ ರದ್ದುಪಡಿಸಲಾಗಿದೆ’ ಎಂದು ಆರೋಪಿಸಿದರು.
ಜೆಡಿಎಸ್ ಪ್ರಮುಖರಾದ ರಾಘವೇಂದ್ರ ಮಡಿವಾಳ, ರಮೇಶ ನಾಯ್ಕ, ಶೇಖರ ಪೂಜಾರಿ, ಉಪೇಂದ್ರ ಪೈ, ರಾಜೇಶ ಪಟಗಾರ, ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.