
ಸಾಜಿದ್ ಮುಲ್ಲಾ
ಕಾರವಾರ: ‘ಜಿಲ್ಲೆಯ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಗ್ರಾಹಕರೊಂದಿಗೆ ಕಡ್ಡಾಯವಾಗಿ ಕನ್ನಡದಲ್ಲೇ ವ್ಯವಹರಿಸಬೇಕು. ಈ ನಿಟ್ಟಿನಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳು ಕ್ರಮವಹಿಸಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚಿಸಿದರು.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಅನುಷ್ಠಾನ ಕುರಿತಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುಚಲ್ ಮೂಲಕ ಅವರು ಮಂಗಳವಾರ ಸಭೆ ನಡೆಸಿದರು.
‘ಬ್ಯಾಂಕ್‌ಗಳಲ್ಲಿ ಕನ್ನಡ ಬಳಕೆಯ ಕುರಿತಂತೆ ಸಾರ್ವಜನಿಕರಿಂದ ಯಾವುದೇ ದೂರುಗಳು ಬರಬಾರದು. ಬ್ಯಾಂಕ್ ಸಿಬ್ಬಂದಿಗೆ ಸುಲಲಿತವಾಗಿ ಕನ್ನಡ ಮಾತಾಡಲು ಅಗತ್ಯವಿರುವ ತರಬೇತಿಯನ್ನು ಲೀಡ್ ಬ್ಯಾಂಕ್‌ನಿಂದ ನೀಡಬೇಕು’ ಎಂದರು.
‘ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯಮಗಳು, ಹೋಟೆಲ್‌ಗಳ ನಾಮಫಲಕಗಳ ಮೇಲ್ಬಾಗದಲ್ಲಿ ಶೇ 60ರಷ್ಟು ಕನ್ನಡ ಬಳಕೆ ಮಾಡಬೇಕು. ನಿಯಮ ಪಾಲಿಸದಿದ್ದರೆ ದಂಡ ವಿಧಿಸಬೇಕು. ಹೆದ್ದಾರಿಗಳು, ಗ್ರಾಮೀಣ ರಸ್ತೆಗಳು, ಬಡಾವಣೆ ಪ್ರದೇಶಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ 60ರಷ್ಟು ಕನ್ನಡ ಭಾಷೆಯಲ್ಲಿ ಮಾಹಿತಿ ಇರಬೇಕು. ಕನ್ನಡ ಭಾಷೆ ಅನುಷ್ಠಾನ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು’ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.