
ಕಾರವಾರ: ‘ಜಿಲ್ಲೆಯನ್ನು ಮಾದಕ ವಸ್ತುಗಳ ಬಳಕೆಯಿಂದ ಸಂಪೂರ್ಣ ಮುಕ್ತಗೊಳಿಸಲು ಪೊಲೀಸ್ ಇಲಾಖೆಯ ಜೊತೆಗೆ ಇತರ ಇಲಾಖೆಗಳು ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎನ್‌ಕಾರ್ಡ್ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.
‘ರೆಸಾರ್ಟ್ ಮತ್ತು ಹೋಮ್ ಸ್ಟೇ ಗಳಲ್ಲಿ ಮಾದಕ ವಸ್ತುಗಳ ಸರಬರಾಜು ಮತ್ತು ಬಳಕೆ ಬಗ್ಗೆ ನಿರಂತರವಾಗಿ ಪರಿಶೀಲಿಸಬೇಕು. ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಡ್ರಗ್ ಸೇವನೆಯಲ್ಲಿ ಪತ್ತೆಯಾಗಿ ಚಿಕಿತ್ಸೆ ಪಡೆದವರ ಬಗ್ಗೆ ಪ್ರತ್ಯೇಕ ದಾಖಲಾತಿ ನಿರ್ವಹಿಸಿ, ಅವರು ಸಂಪೂರ್ಣವಾಗಿ ಈ ವ್ಯಸನದಿಂದ ಬಿಡುಗಡೆಯಾಗುವವರೆಗೂ ಅವರ ಮೇಲೆ ನಿಗಾ ಇರಿಸಬೇಕು’ ಎಂದರು.
ಔಷಧ ಮಳಿಗೆಗಳಲ್ಲಿ ವೈದ್ಯರ ಸಲಹೆ ಚೀಟಿ ಇಲ್ಲದೇ ಔಷಧಗಳನ್ನು ವಿತರಣೆ ಮಾಡದಂತೆ ಮಳಿಗೆಗಳ ಮಾಲೀಕರಿಗೆ ಸೂಚಿಸುವಂತೆ ಜಿಲ್ಲಾ ಔಷಧ ನಿಯಂತ್ರಕರಿಗೆ ನಿರ್ದೇಶನ ನೀಡಿದರು.
ಮೀನುಗಾರಿಕಾ ಬಂದರು, ಕಡಲತೀರಗಳಲ್ಲಿ ಮಾದಕ ವಸ್ತುಗಳ ಸರಬರಾಜು ಮತ್ತು ಸೇವನೆ ಕುರಿತಂತೆ ಹೆಚ್ಚಿನ ತಪಾಸಣೆಗಳನ್ನು ನಡೆಸಲು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ ರಾವ್, ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.