
ಹಳಿಯಾಳ: ನ್ಯಾಯಾಲಯದಲ್ಲಿ ದಾಖಲಾಗಿರುವ ಬಾಕಿ ಇರುವ ಪ್ರಕರಣವನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು 2026 ಜ.2 ರಿಂದ ನಡೆಯುವ 90 ದಿನಗಳ ವಿಶೇಷ ಅಭಿಯಾನದಲ್ಲಿ ಅವಕಾಶ ವಿರುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸುಜಾತಾ ಪಾಟೀಲ ಹಾಗೂ ನ್ಯಾಯಾಧೀಶೆ ಗೀತಾ ಹೇಳಿದರು.
ಮಂಗಳವಾರ ಇಲ್ಲಿನ ನ್ಯಾಯಾಲಯದಲ್ಲಿ ಮಾಧ್ಯಮದವರೊಂದಿಗೆ ಜಂಟಿಯಾಗಿ ಮಾತನಾಡಿ, ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನ ಸಹಯೋಗದೊಂದಿಗೆ ನ್ಯಾಯಾಲಯದಲ್ಲಿ ದಾಖಲಾದ ರಾಜಿಯಾಗಬಲ್ಲ ಪ್ರಕರಣಗಳಲ್ಲಿ ಉಭಯ ಕಕ್ಷಿದಾರರು ಮಧ್ಯಸ್ಥಿಕೆ ಅಭಿಯಾನದ ಮೂಲಕ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣ, ಬ್ಯಾಂಕ್ ವಸೂಲಾತಿ ಪ್ರಕರಣ, ಕಾರ್ಮಿಕ ವಿವಾದ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳ, ಭೂ ಸ್ವಾಧೀನ ಪ್ರಕರಣ, ಚೆಕ್ ಅಮಾನ್ಯದ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ, ವೈವಾಹಿಕ, ಕುಟುಂಬ ನ್ಯಾಯಾಲಯದ ಪ್ರಕರಣ (ವಿಚ್ಚೇದನೆ ಹೊರತುಪಡಿಸಿ), ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು.
ಪ್ರಕರಣ ದಾಖಲಾದ ಉಭಯ ಕಕ್ಷಿದಾರರಿಗೆ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದವೂ ಬಗೆಹರಿಯುತ್ತದೆ. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿಗೆ ನೇರವಾಗಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.