ಕಾರವಾರ: ‘ಜಿಲ್ಲೆಯ ಮೂರು ತಾಲ್ಲೂಕುಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸ್ಥಳ ಗುರುತಿಸಿ ಪ್ರಸ್ತಾವ ಸಲ್ಲಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳಿಗೆ ಸೂಚಿಸಿದರು.
‘ಮೆಕ್ಕೆಜೋಳ ಫಸಲು ಕಟಾವು ಮುಗಿದು ಹಲವು ದಿನ ಕಳೆದಿದೆ. ರೈತರು ಫಸಲು ಮಾರಾಟದಲ್ಲಿ ತೊಡಗುತ್ತಿದ್ದು, ಇದೇ ಸಂದರ್ಭದಲ್ಲಿ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕನಿಷ್ಠ ಬೆಂಬಲ ಬೆಲೆ ಪ್ರಯೋಜನ ಸಿಗುವಂತಾಗಲು ಸಾಧ್ಯವಾದಷ್ಟು ಬೇಗನೆ ಖರೀದಿ ಕೇಂದ್ರ ಆರಂಭಿಸಲು ಕ್ರಮವಾಗಬೇಕು’ ಎಂದು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿ ಸಭೆಯಲ್ಲಿ ಸೂಚನೆ ನೀಡಿದರು.
‘ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಮೆಕ್ಕಜೋಳಕ್ಕೆ ಪ್ರತಿ ಕ್ವಿಂಟಾಲ್‍ಗೆ ₹2,400 ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದೆ. ಜಿಲ್ಲೆಯಲ್ಲಿ ಪ್ರಸ್ತುತ ಕಟಾವು ಪ್ರಕ್ರಿಯೆ ನಡೆಯುತ್ತಿರುವುದರಿಂದ ಮಾರುಕಟ್ಟೆ ದರ ಸರಾಸರಿ ₹1,950 ಇದೆ. ಫಸಲು ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದ್ದಂತೆ ದರ ಇಳಿಕೆಯಾಗುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಖರೀದಿ ಕೇಂದ್ರದ ಸೌಲಭ್ಯ ರೈತರಿಗೆ ಸಿಗಬೇಕು’ ಎಂದರು.
‘ಮೆಕ್ಕೆಜೋಳ ಹೆಚ್ಚು ಬೆಳೆಯುವ ಹಳಿಯಾಳ, ಮುಂಡಗೋಡ, ಶಿರಸಿ ತಾಲ್ಲೂಕಿನ ಬನವಾಸಿ ಭಾಗದ ರೈತರಿಗೆ ಅನುಕೂಲವಾಗುವಂತೆ ಆಯಾ ಪ್ರದೇಶ ವ್ಯಾಪ್ತಿಯಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಬೇಕು’ ಎಂದು ತಿಳಿಸಿದರು.
‘ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 8,100 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕಜೋಳವನ್ನು ಬೆಳೆಯಲಾಗಿದೆ. ಅತಿವೃಷ್ಟಿಯಿಂದ ನಿರೀಕ್ಷಿಸಿದಷ್ಟು ಫಸಲು ರೈತರಿಗೆ ಸಿಗುವ ಸಾಧರ್ಯತೆ ಕಡಿಮೆ ಇದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ ಗಾಂವಕರ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಆಹಾರ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್, ಎಪಿಎಂಸಿ ಸಹಾಯಕ ನಿರ್ದೇಶಕ ಮಂಗೇಶ್ ನಾಯ್ಕ, ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸಮೀಪದ ಕೃಷಿ ಮಾರುಕಟ್ಟೆ ಕೇಂದ್ರಗಳಲ್ಲಿ ಖರೀದಿ ಕೇಂದ್ರಗಳ್ನು ತೆರೆಯಲು ಕ್ರಮ ಕೈಗೊಳ್ಳಬೇಕು. ಖರೀದಿ ಕೇಂದ್ರ ತೆರೆದ ನಂತರ ರೈತರಿಗೆ ಅಗತ್ಯ ಮಾಹಿತಿ ತಲುಪಿಸಿಕೆ.ಲಕ್ಷ್ಮಿಪ್ರಿಯಾ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.