ADVERTISEMENT

ಶಿರಸಿ| ಸಿರಿಧಾನ್ಯ ಬಳಕೆಯಿಂದ ಸದೃಢ ಆರೋಗ್ಯ: ಶಾಸಕ ಭೀಮಣ್ಣ ನಾಯ್ಕ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 5:03 IST
Last Updated 15 ಜನವರಿ 2026, 5:03 IST
ಶಿರಸಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾವಯವ ಮತ್ತು ಸಿರಿಧಾನ್ಯಗಳ ನಡಿಗೆ ಜಾಗೃತಿ ಜಾಥಾದಲ್ಲಿ ಶಾಸಕ ಭೀಮಣ್ಣ ನಾಯ್ಕ ಪಾಲ್ಗೊಂಡರು
ಶಿರಸಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾವಯವ ಮತ್ತು ಸಿರಿಧಾನ್ಯಗಳ ನಡಿಗೆ ಜಾಗೃತಿ ಜಾಥಾದಲ್ಲಿ ಶಾಸಕ ಭೀಮಣ್ಣ ನಾಯ್ಕ ಪಾಲ್ಗೊಂಡರು   

ಶಿರಸಿ: ‘ಬದಲಾಗುತ್ತಿರುವ ಜೀವನಶೈಲಿಯಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾವಯವ ಕೃಷಿ ಪದ್ಧತಿ ಹಾಗೂ ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳ ಬಳಕೆ ಇಂದಿನ ಅನಿವಾರ್ಯ ಅಗತ್ಯವಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಅರಣ್ಯ ಮಹಾವಿದ್ಯಾಲಯದ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಸಾವಯವ ಮತ್ತು ಸಿರಿಧಾನ್ಯಗಳ ನಡಿಗೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಮ್ಮ ಹಿರಿಯರು ಸಿರಿಧಾನ್ಯಗಳನ್ನು ನಿಯಮಿತವಾಗಿ ಬಳಸುತ್ತಿದ್ದರಿಂದಲೇ ದೀರ್ಘಕಾಲದವರೆಗೆ ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಾಗಿದ್ದರು. ಆದರೆ ಇಂದಿನ ಪೀಳಿಗೆಯು ಜಂಕ್ ಫುಡ್‌ಗಳ ಮೋಹಕ್ಕೆ ಬಿದ್ದು ಆರೋಗ್ಯವನ್ನು ಹಾಳುಮಾಡಿಕೊಳ್ಳುತ್ತಿದೆ. ಯುವಜನತೆ ತಕ್ಷಣದ ಆಹಾರದ ಬದಲಾಗಿ ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳನ್ನು ತಮ್ಮ ಆಹಾರ ಕ್ರಮದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ADVERTISEMENT

‘ರೈತರು ಸಹ ಕೇವಲ ಇಳುವರಿಯನ್ನು ಗಮನಿಸದೆ, ರಾಸಾಯನಿಕ ಮುಕ್ತ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ವಿಷಮುಕ್ತ ಆಹಾರ ಉತ್ಪಾದನೆಗೆ ಮುಂದಾಗಬೇಕು’ ಎಂದು ಕರೆ ನೀಡಿದರು.

‘ನಮ್ಮ ನಡಿಗೆ ಸಾವಯವ ಮತ್ತು ಸಿರಿಧಾನ್ಯಗಳ ಕಡೆಗೆ’ ಎಂಬ ಘೋಷವಾಕ್ಯದೊಂದಿಗೆ ನಡೆದ ಜಾಗೃತಿ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಬೆಳಿಗ್ಗೆ 6.30 ರಿಂದ 8.30 ರವರೆಗೆ ನಡೆದ ನಡಿಗೆಯಲ್ಲಿ ಸಿರಿಧಾನ್ಯಗಳ ಮಹತ್ವ ಮತ್ತು ಆರೋಗ್ಯದ ಪ್ರಯೋಜನಗಳ ಕುರಿತು ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಕೃಷಿ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ನೂರಾರು ಸಾರ್ವಜನಿಕರು ಶಿಸ್ತುಬದ್ಧವಾಗಿ ಜಾಥಾದಲ್ಲಿ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.