
ಶಿರಸಿ: ‘ಸರ್ಕಾರಿ ಶಾಲೆಗಳು ಸಮಾಜದ ಆಸ್ತಿಯಾಗಿದ್ದು, ಅವುಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.3ಕ್ಕೆ ಮಂಗಳವಾರ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ಇದೇ ವೇಳೆ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆ ಇರುವುದರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಶಾಸಕರು, ಶಿಕ್ಷಕರು ಮತ್ತು ಪೋಷಕರೊಂದಿಗೆ ಈ ಕುರಿತು ಚರ್ಚೆ ನಡೆಸಿದರು.
ನಂತರ ಮಾತನಾಡಿದ ಅವರು, ‘ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಗುಣಮಟ್ಟದ ಶಿಕ್ಷಣ ಮತ್ತು ಉಚಿತ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕಿದೆ. ಶಿಕ್ಷಕರು ಶಾಲಾ ವ್ಯಾಪ್ತಿಯ ಪೋಷಕರನ್ನು ಖುದ್ದಾಗಿ ಭೇಟಿ ಮಾಡಿ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಪ್ರೇರೇಪಿಸಬೇಕು. ಶಾಲೆಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ಮತ್ತು ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಮೂಲಕ ಪೋಷಕರಲ್ಲಿ ಭರವಸೆ ಮೂಡಿಸುವುದು ಇಂದಿನ ಅಗತ್ಯವಾಗಿದೆ’ ಎಂದು ಹೇಳಿದರು.
ಮಕ್ಕಳ ದಾಖಲಾತಿ ಹೆಚ್ಚಿಸುವ ಪ್ರಕ್ರಿಯೆಯಲ್ಲಿ ಸ್ಥಳೀಯ ಮುಖಂಡರು ಮತ್ತು ನಾಗರಿಕರು ಕೈಜೋಡಿಸಬೇಕೆಂದು ಅವರು ಮನವಿ ಮಾಡಿದರು.
ನಗರಸಭೆ ಸದಸ್ಯರು, ಸ್ಥಳೀಯ ವಾರ್ಡ್ ಪ್ರಮುಖರು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.