ADVERTISEMENT

ಶಿರೂರು, ಉಳುವರೆಗೆ ಸಂಸದ ಕಾಗೇರಿ ಭೇಟಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2024, 14:16 IST
Last Updated 27 ಜುಲೈ 2024, 14:16 IST
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಂದ ಕಣ್ಮರೆಯಾದವರ ಪತ್ತೆ ಕಾರ್ಯಾಚರಣೆಯ ಮಾಹಿತಿ ಪಡೆದರು.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಂಕೋಲಾದ ಶಿರೂರಿನಲ್ಲಿ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರಿಂದ ಕಣ್ಮರೆಯಾದವರ ಪತ್ತೆ ಕಾರ್ಯಾಚರಣೆಯ ಮಾಹಿತಿ ಪಡೆದರು.   

ಅಂಕೋಲಾ: ತಾಲ್ಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿದ ಸ್ಥಳಕ್ಕೆ ಮತ್ತು ಘಟನೆಯಿಂದಾಗಿ ಹಾನಿ ಸಂಭವಿಸಿದ ಉಳುವರೆ ಗ್ರಾಮಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಶನಿವಾರ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ದುರ್ಘಟನೆಯಲ್ಲಿ ಕಣ್ಮರೆಯಾಗಿರುವ ಮೂವರಿಗೆ ಗಂಗಾವಳಿ ನದಿಯಲ್ಲಿ ನಡೆಸಲಾಗುತ್ತಿರುವ ರಕ್ಷಣಾ ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರೊಂದಿಗೆ ಚರ್ಚೆ ನಡೆಸಿದ ಅವರು ಸ್ಥಳೀಯರಾದ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ ಜತೆಗೆ ಕೇರಳದ ಲಾರಿ ಚಾಲಕ ಅರ್ಜುನ್ ಅವರನ್ನು ಶೀಘ್ರ ಪತ್ತೆ ಮಾಡುವಂತೆ ಸೂಚಿಸಿದರು.

ಕಣ್ಮರೆಯಾದ ಜಗನ್ನಾಥ ನಾಯ್ಕ ಅವರ ಮನೆ, ಶಿರೂರು ಮತ್ತು ಉಳುವರೆ ಗ್ರಾಮಕ್ಕೆ ಭೇಟಿ ನೀಡಿ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದವರ ಬೇಡಿಕೆಗಳನ್ನು ಆಲಿಸಿದರು.

ADVERTISEMENT

‘ದುರ್ಘಟನೆಯಲ್ಲಿ ಜೀವ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡುವ ಜತೆಗೆ ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಜನರಿಗೆ ಶಾಶ್ವತ ಪರಿಹಾರ ಒದಗಿಸುವ ದಿಸೆಯಲ್ಲಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ಶಾಸಕ ದಿನಕರ ಶೆಟ್ಟಿ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ, ಪ್ರಮುಖರಾದ ಗೋಪಾಲಕೃಷ್ಣ ವೈದ್ಯ, ಸಂಜಯ ನಾಯ್ಕ, ಭಾಸ್ಕರ ನಾರ್ವೇಕರ್, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.