ADVERTISEMENT

ರೆಸಾರ್ಟ್‌ ನಿಯಂತ್ರಣಕ್ಕೆ ಕಠಿಣ ಕಾನೂನು: ಸಂಸದ ಅನಂತಕುಮಾರ್ ಹೆಗಡೆ

₹ 6 ಕೋಟಿ ವೆಚ್ಚ ರಸ್ತೆ ಕಾಮಗಾರಿಗೆ ಚಾಲನೆ: ಸಂಸದ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 2:40 IST
Last Updated 30 ನವೆಂಬರ್ 2020, 2:40 IST
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅನುದಾನದಲ್ಲಿ ನಿರ್ಮಿಸುತ್ತಿರುವ ಕುಂಭಾರವಾಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೆಲೋಲಿ-ಗೋಡಸೇತ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಮಾತನಾಡಿದರು
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅನುದಾನದಲ್ಲಿ ನಿರ್ಮಿಸುತ್ತಿರುವ ಕುಂಭಾರವಾಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೆಲೋಲಿ-ಗೋಡಸೇತ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಮಾತನಾಡಿದರು   

ಜೊಯಿಡಾ: ತಾಲ್ಲೂಕಿನಲ್ಲಿ ಪ್ರವಾಸೋದ್ಯಮದ ಹೆಸರಿನಲ್ಲಿ ನಾಯಿಕೊಡೆಗಳಂತೆ ರೆಸಾರ್ಟ್‌ಗಳು ತಲೆ ಎತ್ತಿದ್ದು, ‌ಅವುಗಳ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಯೊಂದಿಗೆ ಕಠಿಣ ಕಾನೂನು ರೂಪಿಸಲಾಗುತ್ತಿದೆ. ರೆಸಾರ್ಟ್‌ಗಳು ಜನಪರವಾಗಿ, ನ್ಯಾಯಯುತವಾಗಿ, ಸಮಾಜಕ್ಕೆ ಅನೂಕೂಲ ವಾಗುವಂತೆ ಕಾರ್ಯನಿರ್ವಹಿಸಲಿ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದರು.

ಅವರು ಭಾನುವಾರ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ಸುಮಾರು ₹6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ತಾಲ್ಲೂಕಿನ ಕುಂಭಾರವಾಡ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೆಲೋಲಿ- ಗೋಡಸೇತ ರಸ್ತೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಜೊಯಿಡಾ ತಾಲ್ಲೂಕಿನ ಜನರು ಮುಗ್ಧರು, ಅಮಾಯಕರು ಎಂಬ ಕಾರಣಕ್ಕೆ ಅಧಿಕಾರಿಗಳು ಜನರಿಗೆ ಅನ್ಯಾಯ ಮಾಡಬಾರದು. ತಾಲ್ಲೂಕಿನ ಅಭಿವೃದ್ಧಿಯಲ್ಲಿ ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಸಹಕಾರ ನೀಡಬೇಕು. ಕುಣಬಿ ಜನರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸುನಿಲ್ ಹೆಗಡೆ, ತಾಲ್ಲೂಕಿನ ಸುಮಾರು 60 ಹಳ್ಳಿಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಸಂಸದರು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಯಾವತ್ತೂ ಪ್ರಚಾರ ಪಡೆದುಕೊಂಡಿಲ್ಲ. ಹಾಲಿ ಶಾಸಕರು ಸಾವಿರಾರು ಕೋಟಿ ಅನುದಾನ ಜೊಯಿಡಾ ತಾಲ್ಲೂಕಿಗೆ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಚಾರ ಮಾಡಿಕೊಂಡಿದ್ದಾರೆ, ಆದರೆ ತಾಲ್ಲೂಕು ಕಳೆದ ಎಂಟು ವರ್ಷಗಳ ಹಿಂದೆ ಹೇಗಿತ್ತೋ ಅದೇ ರೀತಿಯಲ್ಲಿ ಇದೆ. ಆದ್ದರಿಂದ ಜನರು ಪ್ರಚಾರ ಪ್ರಿಯ ಜನಪ್ರತಿನಿಧಿಗಳಿಂದ ದೂರ ಇರಬೇಕು ಎಂದು ಹೇಳಿದರು.

ಕುಣಬಿ ಜನರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಕುಣಬಿ ಸಮಾಜದ ಮುಖಂಡರು ಸಂಸದರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯ ರಮೇಶ ನಾಯ್ಕ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಸಂತೋಷ್ ರೇಡ್ಕರ್, ಜೊಯಿಡಾ ತಹಶೀಲ್ದಾರ್ ಸಂಜಯ ಕಾಂಬಳೆ, ವಿವಿಧ ಇಲಾಖೆಗಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.