
ಕಾರವಾರ: ‘ನೀರಿನ ಕೊರತೆ ಇರುವ ಪ್ರದೇಶಗಳನ್ನು ಗುರುತಿಸಿ ಅಂತಹ ಸ್ಥಳಗಳಲ್ಲಿ ಖಾಸಗಿ ಕೊಳವೆ ಬಾವಿ, ಟ್ಯಾಂಕರ್‌ಗಳನ್ನು ಬಾಡಿಗೆ ಆಧಾರದಲ್ಲಿ ಗುರುತಿಸಿಟ್ಟುಕೊಳ್ಳಬೇಕು. ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಎಚ್ಚರವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆ ನಡೆಸಿದ ಅವರು, ‘ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಈಗಿಂದಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
‘ಬೇಸಿಗೆಯಲ್ಲಿ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳ ಪಟ್ಟಿ ಸಿದ್ಧಪಡಿಸಿಕೊಳ್ಳಿ. ನೀರು ಸರಬರಾಜು ಸೇರಿದಂತೆ ಇತರೇ ಅಗತ್ಯ ಪರ್ಯಾಯ ಕ್ರಮಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಜಾನುವಾರುಗಳಿಗೆ ನೀರು ಮತ್ತು ಮೇವಿನ ಕೊರತೆಯಾಗದಂತೆ ಸಿದ್ದತೆಗಳನ್ನು ಮಾಡಿಕೊಳ್ಳಬೇಕು’ ಎಂದರು.
‘ಮಳೆಗಾಲದಲ್ಲಿ ಪ್ರವಾಹ ಉಂಟಾಗುವುದನ್ನು ತಡೆಯುವ ನಿಟ್ಟಿನಲ್ಲಿ ಈಗಿನಿಂದಲೇ ಅಗತ್ಯ ದುರಸ್ತಿ, ನಿರ್ಮಾಣ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾಮಗಾರಿಗಳನ್ನು ಕೈಗೊಳ್ಳಿ. ನೌಕಾನೆಲೆಯ ಅಂಚಿನ ಮುದಗಾ, ಬಿಣಗಾ, ಅರಗಾ, ಚೆಂಡಿಯಾ, ಇಡೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗಲು ಯಾವುದೇ ಅಡೆತಡೆಗಳು ಇಲ್ಲದಂತೆ ಅಗತ್ಯವಿರುವ ದುರಸ್ತಿ, ಹೂಳೆತ್ತುವ ಕೆಲಸ ನಡೆಸಿ’ ಎಂದರು.
‘ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಕ್ತಾಯಗೊಳಿಸಬೇಕು’ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಡಿಸಿಎಫ್ ಸಿ.ರವಿಶಂಕರ್, ನೌಕಾದಳ, ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮಳೆ ಮಾಪನ ಯಂತ್ರ ಸುಸ್ಥಿತಿಯಲ್ಲಿಡಿ
‘ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಳೆ ಮಾಪನ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಬೇಕು. ಕೆಲಸ ನಿರ್ವಹಿಸುವ ಸಾಮರ್ಥ್ಯ ಇಲ್ಲದ ಯಂತ್ರಗಳನ್ನು ಬದಲಿಸುವ ದುರಸ್ತಿ ನಡೆಸುವ ಕೆಲಸ ತಕ್ಷಣ ಕೈಗೆತ್ತಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚಿಸಿದರು. ‘ಗುಡ್ಡ ಕುಸಿತ ತಡೆಯಲು ಕೈಗೊಂಡಿರುವ ಕಾಮಗಾರಿಗಳಿಗೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ನಿರ್ಮಾಣ ಕಾಮಗಾರಿ ಕೈಗೊಳ್ಳುವ ಇಲಾಖೆಗಳು ಕೂಡಲೇ ಟೆಂಡರ್ ಕರೆದು ನಿಗದಿತ ಅವಧಿಯಲ್ಲಿ ಎಲ್ಲ ಕಾಮಗಾರಿಗಳನ್ನು ಮುಕ್ತಾಯಗೊಳಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.