ADVERTISEMENT

‘ಶಿಕ್ಷಣ ಇಲಾಖೆ ಅಧಿಕಾರಿಗಳೇ ತೊಡಕು’

ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಪ್ರಮುಖರ ಸಭೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2019, 18:30 IST
Last Updated 16 ಅಕ್ಟೋಬರ್ 2019, 18:30 IST
ಶಿರಸಿಯಲ್ಲಿ ನಡೆದ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿ ಪ್ರಮುಖರ ಸಭೆಯಲ್ಲಿ ಕೆಎಎಂಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿದು
ಶಿರಸಿಯಲ್ಲಿ ನಡೆದ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿ ಪ್ರಮುಖರ ಸಭೆಯಲ್ಲಿ ಕೆಎಎಂಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿದು   

ಶಿರಸಿ: ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಆರ್.ಟಿ.ಇ, ಆರ್.ಟಿ.ಐ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೇ ತೊಡಕಾಗಿದ್ದಾರೆ ಎಂದು ಕರ್ನಾಟಕ ಇಂಗ್ಲಿಷ್‌ ಮಾಧ್ಯಮ ಮತ್ತು ಪ್ರೌಢಶಾಲೆಗಳ ಅಧಿಕಾರ ವರ್ಗಗಳ ಸಂಯೋಜನೆ ( ಕೆ.ಎ.ಎಂ.ಎಸ್) ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿದರು.

ಬುಧವಾರ ಇಲ್ಲಿ ಆಯೋಜಿಸಿದ್ದ ಶಿರಸಿ ಶೈಕ್ಷಣಿಕ ಜಿಲ್ಲೆ ಅನುದಾನರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆಗಳ ಆಡಳಿತ ಮಂಡಳಿ ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು. ಖಾಸಗಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಸರ್ಕಾರಕ್ಕೆ ಮಲತಾಯಿ ಧೋರಣೆಯಿದೆ. ಖಾಸಗಿಯವರಿಗೆ ಮಾರಕವಾಗುವ ಸುತ್ತೋಲೆ ಹೊರಡಿಡುವ ಸರ್ಕಾರ, ಬಲ ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ. ರಾಜ್ಯದ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಆರ್‌.ಟಿ.ಇ ಅಡಿಯಲ್ಲಿ ಸುಮಾರು ₹ 1700 ಕೋಟಿ ನೀಡುವುದು ಬಾಕಿಯಿದೆ. ಈ ಭಾರ ತಡೆಯಲಾಗದೇ ಕೆಲವು ಸಂಸ್ಥೆಗಳು ಮುಚ್ಚುವ ಹಂತ ತಲುಪಿವೆ. ತಕ್ಷಣ ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಶೇ 52ರಷ್ಟು ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆ ಅವಲಂಬಿಸಿದ್ದಾರೆ. ಆದರೆ, ಖಾಸಗಿ ಶಾಲೆಯ ಸಿಬ್ಬಂದಿಗೆ ಸೇವಾ ಭದ್ರತೆ ಇಲ್ಲವಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕರಿಗೆ ನೀಡುವ ಅರ್ಧದಷ್ಟು ಸಂಬಳಕ್ಕೆ ಖಾಸಗಿ ಶಾಲೆಗಳ ಶಿಕ್ಷಕರು ದುಡಿಯುತ್ತಿದ್ದಾರೆ. ಆದರೆ, ಸರ್ಕಾರ ಇಂತಹ ಶಾಲೆಗಳ ಮೇಲೆ ಆಕ್ರಮಣ ಮಾಡುತ್ತಿದೆ ಎಂದು ಆರೋಪಿಸಿದರು.

ADVERTISEMENT

ಎಂ.ಇ.ಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಿ.ಎಂ.ಹೆಗಡೆ ಮುಳಖಂಡ ಅಧ್ಯಕ್ಷತೆ ವಹಿಸಿದ್ದರು. ಎಂ.ಇ.ಎಸ್ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ಪ್ರಮಿಖರಾದ ಎಸ್.ಪಿ.ಶೆಟ್ಟಿ, ಹಾಲಪ್ಪ ಜಕಲಣ್ಣನವರ್, ಸುಧೀರ್ ಭಟ್ಟ, ಇಕ್ರಾ ಶಿಕ್ಷಣ ಸಂಸ್ಥೆಯ ಅಬ್ದುಲ್ ಖುದ್ದೂಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.