ADVERTISEMENT

ಆಕರ್ಷಕ ಪಥ ಸಂಚಲನ, ಮಕ್ಕಳ ನೃತ್ಯರೂಪಕ

ವಿಜೃಂಭಣೆಯಿಂದ ನಡೆದ ಗಣರಾಜ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 12:39 IST
Last Updated 26 ಜನವರಿ 2020, 12:39 IST
ಶಿರಸಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು
ಶಿರಸಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು   

ಶಿರಸಿ: ಪುಟಾಣಿಗಳ ದೇಶಭಕ್ತಿ ಸಾರುವ ನೃತ್ಯ, ಆಕರ್ಷಕ ಪಥ ಸಂಚಲನ, ಕವಾಯತು, ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸುವ ಮೂಲಕ ಭಾನುವಾರ ಇಲ್ಲಿ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರು ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿದರು. ನಂತರ ಪೊಲೀಸರು, ಗೃಹ ರಕ್ಷಕ ದಳ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಶಾಲಾ ವಿದ್ಯಾರ್ಥಿಗಳು ಪಥ ಸಂಚಲನ ನಡೆಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಅಜಿತ ಮನೋಚೇತನಾ ಶಾಲೆಯ ಬುದ್ಧಿಮಾಂದ್ಯ ಮಕ್ಕಳು ಪಥ ಸಂಚಲನದಲ್ಲಿ ಭಾಗವಹಿಸಿ ಗಮನ ಸೆಳೆದರು.

ಆವೆಮರಿಯಾ, ಸೇಂಟ್ ಅಂಥೋನಿ, ಶಾಸಕರ ಮಾದರಿ ಶಾಲೆ, ಡಾನ್‌ಬಾಸ್ಕೊ, ಲಯನ್ಸ್ ಶಾಲೆಯ ಮಕ್ಕಳು ವಾದ್ಯದೊಂದಿಗೆ ದೇಶಭಕ್ತಿ ಗೀತೆ ಪ್ರಸ್ತುತಪಡಿಸುತ್ತ ಹೆಜ್ಜೆ ಹಾಕಿದರು.

ADVERTISEMENT

ಗಣರಾಜ್ಯೋತ್ಸವ ಸಂದೇಶ ನೀಡಿದ ಡಾ.ಉಳ್ಳಾಗಡ್ಡಿ ಅವರು, ‘ಅನೇಕ ಹಿರಿಯರು ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಸ್ವತಂತ್ರ್ಯ ದೇಶಕ್ಕಾಗಿ ರೂಪಿತವಾಗಿರುವ ಸಂವಿಧಾನವು ಪ್ರಜೆಗಳಿಗೆ ಮೂಲಭೂತ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳ ಜೊತೆಯಲ್ಲಿ ನಾವು ಪ್ರಜೆಗಳು ಕರ್ತವ್ಯವನ್ನೂ ಪಾಲಿಸಬೇಕು. ಯಾವ ಮುಂದುವರಿದ ದೇಶಗಳಿಗೆ ಕಮ್ಮಿಯಿಲ್ಲದಂತೆ ಭಾರತ, ಆರ್ಥಿಕ, ಶೈಕ್ಷಣಿಕ, ವೈಜ್ಞಾನಿಕವಾಗಿ ಮುಂದುವರಿದಿದೆ. ಇಂಥ ಸುಭದ್ರ ರಾಷ್ಟ್ರದಲ್ಲಿ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿವೆ’ ಎಂದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಉಪಾಧ್ಯಕ್ಷ ಚಂದ್ರು ದೇವಾಡಿಗ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಉಷಾ ಹೆಗಡೆ, ಬಸವರಾಜ ದೊಡ್ಮನಿ, ಡಿವೈಎಸ್ಪಿ ಜಿ.ಟಿ.ನಾಯಕ, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ಪೌರಾಯುಕ್ತ ರಮೇಶ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.